ರಾಜ್ಯ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ

Update: 2018-01-25 06:00 GMT

ಶಿವಮೊಗ್ಗ, ಜ.25: ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಇಂದಿನ ರಾಜ್ಯ ಬಂದ್ ಕರೆಗೆ ಶಿವಮೊಗ್ಗದಲ್ಲಿ ಪೂರಕ ಸ್ಪಂದನೆ ವ್ಯಕ್ತವಾಗಿಲ್ಲ.

ಶಿವಮೊಗ್ಗದಲ್ಲಿ ಯಾವುದೇ ಸಂಘಟನೆಗಳು ಬಂದ್ ಗೆ ಕರೆ ನೀಡಿರಲಿಲ್ಲ. ಜೊತೆಗೆ ಈ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿ ಕೊಟ್ಟಿರಲಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಉಳಿದಂತೆ ಕರ್ನಾಟಕ ಚಲನಚಿತ್ರ ಮಂಡಳಿ ಬಂದ್ ಗೆ ಬೆಂಬಲ ಸೂಚಿಸಿದ್ದ ಕಾರಣದಿಂದ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಲಾಗಿತ್ತು.

ಸಹಜ ಸ್ಥಿತಿ: ನಗರದಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿತ್ತು. ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಹೊರ ಊರುಗಳಿಗೆ ತೆರಳುವ ಹಾಗೂ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಸರ್ಕಾರಿ, ಖಾಸಗಿ ಬಸ್ ಗಳ ಸಂಚಾರ ಎಂದಿನಂತಿವೆ. ರೈಲು, ಆಟೋ, ಟ್ಯಾಕ್ಸಿಗಳ ಸಂಚಾರ ಸಾಮಾನ್ಯವಾಗಿವೆ. ಅಂಗಡಿ - ಮುಂಗಟ್ಟುಗಳ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿಯಾಗಲಿಲ್ಲ. ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಎಂದಿನಂತಿವೆ.

ಧರಣಿ: ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಧರಣಿ ನಡೆಸಿದರು. ಸಂಘಟನೆಯ ಪ್ರಮುಖ ಜಾವಳ್ಳಿ ಚಂದ್ರು ಸೇರಿದಂತೆ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News