ದೇವೇಗೌಡರ ಸಾಧನೆ ರಾಜ್ಯದ ಜನರಿಗೆ ಗೊತ್ತಿದೆ: ಪಿ.ಜಿ.ಆರ್.ಸಿಂಧ್ಯಾ

Update: 2018-01-26 16:37 GMT

ಬೆಂಗಳೂರು, ಜ.26: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಏನು ಸಾಧನೆ ಮಾಡಿದ್ದಾರೆ ಎಂಬುದು ರಾಜ್ಯದ ಜನರಿಗೆ ತಿಳಿದಿದೆ ಎಂದು ಸಚಿವ ಮಂಜುಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ತಿರುಗೇಟು ನೀಡಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ನಗರದ ಜೆಪಿ ಭವನದಲ್ಲಿ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹತ್ತಾರು ರಾಜಕೀಯ ಭಿನ್ನಾಭಿಪ್ರಾಯಗಳಿರಲಿ. ಆದರೆ, ಸಚಿವ ಎ.ಮಂಜು ಮಾಜಿ ಪ್ರಧಾನಿ ಹಾಗೂ ಹಿರಿಯ ರಾಜಕಾರಣಿ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಈ ಮೂಲಕ ಅವರ ಸಂಸ್ಕೃತಿ ಏನು ಎಂಬುದನ್ನು ತೋರಿಸಿದ್ದಾರೆ ಎಂದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾದುದಾಗಿದೆ. ಆದರೆ, ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದು ಹೇಳಿರುವುದು ಸಂವಿಧಾನಕ್ಕೆ ಮಾಡಿರುವ ಅಪಮಾನ. ಸಂದರ್ಭಕ್ಕನುಗುಣವಾಗಿ ಸಂವಿಧಾನ ತಿದ್ದುಪಡಿ ಮಾಡಲು ಅವಕಾಶವಿದೆ ಹೊರತು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಬಗ್ಗೆ ಮಾತನಾಡುವಾಗ ಸಚಿವ ಮಂಜು ನಾಲಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಅವರ ಸಾಧನೆ ಏನು ಎಂಬುದು ರಾಜ್ಯ ಹಾಗೂ ದೇಶಕ್ಕೆ ತಿಳಿದಿದೆ. ಮಂಜು ಅವರಿಂದ ಸರ್ಟಿಫಿಕೇಟ್ ಪಡೆಯಬೇಕಾದ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾರ ಋಣದಲ್ಲಿ ಯಾರಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಅವರು, ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಮಂಜುಗೆ ಸಹಕಾರ ನೀಡಲಿಲ್ಲ ಎಂದು ಅವರನ್ನು ಎತ್ತಂಗಡಿ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎಂ.ಎಸ್. ನಾರಾಯಣ್‌ರಾವ್, ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಶಾಸಕ ರಾಜಣ್ಣ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News