×
Ad

ಬಿಜೆಪಿ ಶಾಸಕ ಆನಂದ್‌ಸಿಂಗ್ ರಾಜೀನಾಮೆ

Update: 2018-01-27 20:54 IST

ಬೆಂಗಳೂರು, ಜ.27: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಶನಿವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ಸ್ಪೀಕರ್ ಕೋಳಿವಾಡ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಶಾಸಕ ಆನಂದ್‌ಸಿಂಗ್, ‘ನಾನು ಈ ದಿನ, ಕರ್ನಾಟಕ ವಿಧಾನಸಭೆಯ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಒಂದು ಸಾಲಿನ ಪತ್ರವನ್ನು ನೀಡಿದ್ದಾರೆ.

 ಬಳಿಕ ಈ ಬಗ್ಗೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ರಾಜೀನಾಮೆ ಪತ್ರವನ್ನು ಪರಿಶೀಲಿಸಿ, ‘ಶಾಸಕ ಸ್ಥಾನಕ್ಕೆ ಯಾವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೀರಿ, ಏನಾದರೂ ಒತ್ತಡವಿದೆಯೇ’ ಎಂಬುದನ್ನು ಪರಿಶೀಲಿಸಿದ್ದು, ‘ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ’ ಎಂಬುದನ್ನು ಖಚಿತಪಡಿಸಿಕೊಂಡ ನಂತರ ರಾಜೀನಾಮೆ ಅಂಗೀಕರಿಸಿದ್ದಾರೆ.

ಬಹುದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಶಾಸನ ಆನಂದ್ ಸಿಂಗ್, ಜ.6ರಂದು ಹೊಸಪೇಟೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿಯೂ ಪಾಲ್ಗೊಂಡಿರಲಿಲ್ಲ. ಪಕ್ಷದ ಮುಖಂಡರ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್, ಪಕ್ಷ ಬಿಡುವ ಸೂಚನೆ ನೀಡಿದ್ದರು.

ಈ ಮಧ್ಯೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಆನಂದ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಸ್ಥಳೀಯ ಕಾಂಗ್ರೆಸಿಗರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳ ಮಧ್ಯೆಯೇ ಆನಂದ್ ಸಿಂಗ್ ಮುಂದಿನ ನಡೆ ಏನೆಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News