ಪೋಲಿಯೊ ನಿರ್ಲಕ್ಷ ಬೇಡ: ಸಚಿವ ಪ್ರಮೋದ್

Update: 2018-01-28 10:26 GMT

ಉಡುಪಿ, ಜ.28: ದೇಶದಲ್ಲಿ ಪೋಲಿಯೊ ಪ್ರಕರಣಗಳು ಸದ್ಯದಲ್ಲಿ ಶೂನ್ಯ ಪ್ರಮಾಣದಲ್ಲಿದೆ. ಆದರೆ ಪೋಲಿಯೋ ರೋಗ ವಿಶ್ವದಿಂದ ನಿರ್ಮೂಲನೆ ಆಗುವ ವರೆಗೂ, ಅದರ ವಿರುದ್ದದ ಹೋರಾಟ ನಿರಂತರವಾಗಿ ನಡೆಯಲಿದೆ.  ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ನೀಡದಿದ್ದರೂ ಪೋಲಿಯೊ ಬರುವುದಿಲ್ಲ ಎಂಬ ನಿರ್ಲಕ್ಷ್ಯ ತೋರದೆ, 0-5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಉಡುಪಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಇವರ ಸಹಯೋಗದಲ್ಲಿ ರವಿವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 82,872 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಿದ್ದು, ಇದಕ್ಕಾಗಿ 670 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ, 2,695 ಸ್ವಯಂ ಸೇವಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲದ ದಾಖಲೆ ಇದ್ದು, ಇದು ಹೀಗೆ ಮುಂದುವರಿಯಲಿ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆಯಲ್ಲಿ ರೋಟರಿ ಮತ್ತು ಲಯನ್ಸ್ ಕ್ಲಬ್ ಗಳ ಸಹಕಾರ ನಿರಂತರವಾಗಿರಲಿ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಪಂ ಸಿಇಒ ಶಿವಾನಂದ ಕಾಪಶಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಆರ್.ಸಿ.ಎಚ್ ಅಧಿಕಾರಿ ಡಾ.ಎಂ.ಜಿ.ರಾಮ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯೆ ಡಾ.ಕಿಶೋರಿ, ಲಯನ್ಸ್ ಉಪ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರೋಟರಿಯ ಲಸಿಕಾ ಉಸ್ತುವಾರಿ ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು.

     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News