×
Ad

ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸುವ ಸಾಮರ್ಥ್ಯ ಬಿಜೆಪಿ ಸಂಸದರಿಗಿಲ್ಲ: ಮಧು ಬಂಗಾರಪ್ಪ

Update: 2018-01-29 19:07 IST

ಮಡಿಕೇರಿ, ಜ.29 : ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಎದುರು ನಿಂತು ಒತ್ತಾಯಿಸುವ ಸಾಮರ್ಥ್ಯವನ್ನು ಕಳೆದುಕೊಂಡಿರುವ ಕರ್ನಾಟಕ ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ಮುಂದೆ ಕೈಕಟ್ಟಿ ನಿಲ್ಲುವುದಕ್ಕಷ್ಟೇ ಸೀಮಿತವಾಗಿದ್ದಾರೆ ಎಂದು ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ.

ನಗರದ ಗೌಡ ಸಮಾಜದಲ್ಲಿ ನಡೆದ ಯುವ ಜೆಡಿಸ್‍ನ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೋದಿ ಹೆಸರಿನಿಂದ ಗೆದ್ದಿರುವ ರಾಜ್ಯದ ಸಂಸದರು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಹೇಳಿದರು.

ರೈತರ ಸಾಲ ಮನ್ನಾ ಮಾಡಲು ಕಾಂಗ್ರೆಸ್ ರಾಹುಲ್ ಗಾಂಧಿಯವರ ಅನುಮತಿಯನ್ನು ಹಾಗೂ ಬಿಜೆಪಿ ಪ್ರಧಾನಿ ನರೇಂದ್ರಮೋದಿ ಅವರ ಅನುಮತಿಯನ್ನು ಪಡೆಯಬೇಕಾಗುತ್ತದೆ. ಆದರೆ, ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ತನ್ನದೇ ಆದ ನಿರ್ಧಾರವನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ತನ್ನ ಬಳಿ ನೋಟುಗಳನ್ನು ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದಿದ್ದರು. ಇದೀಗ ಮತ್ತೆ ತಾವು ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಳ್ಳುತ್ತಿದ್ದು, ಅಧಿಕಾರದಲ್ಲಿದ್ದಾಗ ಯಾಕೆ ಮನ್ನಾ ಮಾಡಲಿಲ್ಲವೆಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಸಾಲ ಮನ್ನಾ ಮಾಡಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಸರ್ಕಾರ ಸಾಲ ಮನ್ನಾದ ಹಣವನ್ನೆ ಬಿಡುಗಡೆ ಮಾಡಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಹೇಳಿಕೆಗಳನ್ನು ನೀಡುವ ಸರ್ಕಾರವಾಗಿದೆಯೆಂದು ಟೀಕಿಸಿದ ಅವರು, ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರು ಪರಸ್ಪರ ಟೀಕಿಸುವುದರಲ್ಲೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೆಜೆಪಿಯಲ್ಲಿದ್ದಾಗ ಟಿಪ್ಪು ಟೋಪಿ ಹಾಕಿದ್ದ ಯಡಿಯೂರಪ್ಪ ಅವರು ಇದೀಗ ಬಿಜೆಪಿಯಲ್ಲಿ ಅಸ್ತಿತ್ವ ಕಂಡುಕೊಳ್ಳುವುದಕ್ಕಾಗಿ ಟಿಪ್ಪು ಟೋಪಿಯನ್ನು ತೆಗೆದಿದ್ದಾರೆ. ಇಂತಹವರಿಗೆ ಮತ್ತೆ ಅಧಿಕಾರ ನೀಡಬೇಕೆ ಎಂದ ಅವರು, ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನು ಜೆಡಿಎಸ್ ಗೆಲ್ಲಲಿದೆ. ಅಲ್ಲದೆ, ಯಡಿಯೂರಪ್ಪ ಅವರನ್ನು ಸೋಲಿಸಲು ಆ ಕ್ಷೇತ್ರದ ಜನ ನಿರ್ಧರಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.

ಬೃಹತ್ ಕಂಪೆನಿಗಳ ಸಾಲ ಮನ್ನಾ ಮಾಡುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ  ಮಾಡುತ್ತಿಲ್ಲ. ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ನಂಬಿಸಿದ ಕಾರಣದಿಂದ ಮೋದಿ ಅವರಿಗೆ ಮತ ಹಾಕಿದರು. ಆದರೆ, ಇಂದಿನವರೆಗೆ ಒಬ್ಬರ ಖಾತೆಗೂ ಹಣ ಬಂದಿಲ್ಲವೆಂದು ಟೀಕಿಸಿದರು.

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದ ಮಧು ಬಂಗಾರಪ್ಪ, 10 ರಿಂದ 15 ಸಾವಿರ ಮತಗಳ ಅಂತರದಿಂದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಜೀವಿಜಯರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಸಂವಿಧಾನವನ್ನು ಬದಲಾಯಿಸುವ ಪಕ್ಷಕ್ಕೆ ಬೆಂಬಲ ನೀಡಬೇಡಿ. ರಾಷ್ಟ್ರೀಯ ಪಕ್ಷಗಳನ್ನು ದೂರವಿಟ್ಟು ಪ್ರಾದೇಶಿಕ ಪಕ್ಷ ಜೆಡಿಎಸ್‍ಗೆ ಅಧಿಕಾರ ನೀಡಿ. ಜೆಡಿಎಸ್‍ನಲ್ಲಿ ಅಭ್ಯರ್ಥಿ ಯಾರೇ ಆಗಿರಲಿ, ನಾವು ನೀಡುತ್ತಿರುವ ಮತ ಕುಮಾರಸ್ವಾಮಿ ಅವರಿಗೆ ಎಂದು ಭಾವಿಸಿ ಮತ ಚಲಾಯಿಸಿ ಎಂದು ಅವರು ಕರೆ ನೀಡಿದರು.

ರಾಜ್ಯದ ಅನ್ನದಾತನ ಕಣ್ಣೀರನ್ನು ಒರೆಸಲು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಾತ್ರ ಸಾಧ್ಯವೆಂದು ತಿಳಿಸಿದ ಚಂದ್ರಶೇಖರ್, ರಾಜ್ಯದಲ್ಲಿ 3 ಸಾವಿರಕ್ಕೂ ಹೆಚ್ಚಿನ ರೈತರು ಸಂಕಷ್ಟಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಈ ರೀತಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಕಣ್ಣೀರು ಒರೆಸುವ ಕೆಲಸ ನಡೆಯಲೇಬೇಕಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡಲಿದ್ದಾರೆ ಎಂದು ಭರವಸೆ ನೀಡಿದರು.

ಜೆಡಿಎಸ್ ಪ್ರಮುಖರು ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಬಿ.ಎ.ಜೀವಿಜಯ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಬದಲಾವಣೆಗೆ ರಾಜ್ಯದ ಜನತೆ ಕಾರಣರಾಗುವ ಮೂಲಕ ‘ಕುಮಾರ ಪರ್ವ’ವನ್ನು ಆರಂಭಿಸಬೇಕೆಂದು ಕರೆ ನೀಡಿದರು.

ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬದಲಾವಣೆಯ ಬಗ್ಗೆ ಮಾತನಾಡಿದ್ದನ್ನು ಪ್ರಸ್ತಾಪಿಸಿ, 1950ರಲ್ಲಿ ಅಂಬೆಡ್ಕರ್ ನೇತೃತ್ವದಲ್ಲಿ ರಚಿಸಲ್ಪಟ್ಟ ಸಂವಿಧಾನಕ್ಕೆ ಮಾನ್ಯತೆಯನ್ನು ನೀಡುವುದರೊಂದಿಗೆ ಸಂವಿಧಾನವೇ ಈ ರಾಷ್ಟ್ರದ ಮಹಾನ್ ಗ್ರಂಥವಾಗಿದೆ. ಇದನ್ನು ಒಪ್ಪದಿದ್ದಲ್ಲಿ ಆತ ಭಾರತೀಯನೇ ಅಲ್ಲವೆಂದು ನುಡಿದರು.

ಜಿಲ್ಲೆ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳು ಸಂಪೂರ್ಣ ವಿಫಲವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಗೆಲ್ಲಿಸುವ ಮೂಲಕ ಇಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಎರಡು ರಾಷ್ಟ್ರೀಯ ಪಕ್ಷಗಳು ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕಾಡಾನೆ ದಾಳಿಯಿಂದ ಅನೇಕ ಜೀವಗಳು ಬಲಿಯಾಗಿದ್ದರೂ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕೋಮು ಭಾವನೆಗಳನ್ನು ಕೆಣಕುತ್ತಿರುವ ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿಲ್ಲವೆಂದು ಆರೋಪಿಸಿದ ಅವರು, ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದಾಗ ಮಾತ್ರ ಕೊಡಗಿನ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

ಜೆಡಿಎಸ್‍ಗೆ ಸೇರ್ಪಡೆ
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷವನ್ನು ತೊರೆದ ಹಲವು ಪ್ರಮುಖರು ಸಮಾವೇಶದಲ್ಲಿ ಜೆಡಿಎಸ್‍ಗೆ ಸೇರ್ಪಡೆಯಾದರು. 

ಸಮಾವೇಶಕ್ಕೂ ಮೊದಲು ಮಧುಬಂಗಾರಪ್ಪ ನಗರದಲ್ಲಿರುವ ವೀರಸೇನಾನಿಗಳ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.

ಪಕ್ಷದ ರಾಜ್ಯ ಮುಖಂಡ ನರಸಿಂಹಮೂರ್ತಿ, ನಗರಾಧ್ಯಕ್ಷರಾದ ಬಿ.ವೈ.ರಾಜೇಶ್, ತಾಲೂಕು ಅಧ್ಯಕ್ಷ ಕೆ.ಸಿ.ಜಗದೀಪ್, ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ.ಎಂ.ಗಣೇಶ್, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್, ಸದಸ್ಯ ಪುಟ್ಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News