×
Ad

ಬೆಂಗಳೂರು: ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಉಪ್ಪಿನ ಸತ್ಯಾಗ್ರಹ

Update: 2018-01-30 19:56 IST

ಬೆಂಗಳೂರು, ಜ.30: ಸಮಾಜದವರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ನಮ್ಮನ್ನು ಕೀಳಾಗಿ ಕಾಣುತ್ತಿವೆ. ಸರಕಾರ ಸಮುದಾಯವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಲಾಯಿತು.

ನಗರದಲ್ಲಿ ಪ್ರತಿಭಟನೆ ನಡೆಸಿದ ಸಮುದಾಯದ ನೂರಾರು ಜನರು ಕೇಂದ್ರ ಮತ್ತು ರಾಜ್ಯ ಸರಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ಉಪ್ಪಾರ, ರಾಜ್ಯದಲ್ಲಿ ಉಪ್ಪಾರ ಸಮುದಾಯ ಇಂದಿಗೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ತೀವ್ರ ಹಿಂದುಳಿದಿವೆ. ಗಾರೆ ಕೆಲಸ, ಕಟ್ಟಡ ಕೆಲಸ, ಕೂಲಿ ಕೆಲಸ ಸೇರಿದಂತೆ ಇನ್ನಿತರ ಕಸುಬುಗಳನ್ನು ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದು, ಅತ್ಯಂತ ಹೀನಾಯವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ಸ್ವಾತಂತ್ರ ಹೋರಾಟದಲ್ಲಿ ಸಮಾಜದವರು ಮುಂಚೂಣಿಯಲ್ಲಿದ್ದರು. ಈ ಬಗ್ಗೆ ಬರಹಗಾರರು ಸರಿಯಾಗಿ ದಾಖಲಿಸಿಲ್ಲ. ದಾಖಲೆಗಳಲ್ಲಿ ಸಮುದಾಯವನ್ನು ಸಂಪೂರ್ಣವಾಗಿ ಮರೆಮಾಚಲಾಗಿದೆ. ಸರಕಾರ ಈ ಬಗ್ಗೆ ಚಿಂತನೆ ನಡೆಸಿ ಹಿಂದುಳಿದಿರುವ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಉಪ್ಪಾರ ಸಮುದಾಯವನ್ನು ಎಸ್ಟಿ ಸಮುದಾಯದ ಅಡಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿ ಹಲವಾರು ಬಾರಿ ಮನವಿ ಮಾಡಲಾಗಿದೆ. ಅಲ್ಲದೆ, ವೆಂಕಟಸ್ವಾಮಿ, ಚಿನ್ನಪ್ಪರೆಡ್ಡಿ ಮತ್ತು ಹಾವನೂರು ಆಯೋಗ ವರದಿಗಳು ಉಪ್ಪಾರ ಸಮಾಜ ಹಿಂದುಳಿದಿದೆ ಎಂದು ಸ್ಪಷ್ಟಪಡಿಸಿವೆ. ಕಾರವಾರ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಉಪ್ಪಾರರನ್ನು ಎಸ್ಟಿ ಪಟ್ಟಿಗೆ ಸೇರಿಸಲಾಗಿದೆ. ಬಿಹಾರದಲ್ಲಿ ನಮ್ಮನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗಿದೆ ಎಂದು ಹೇಳಿದರು.

ಸಮುದಾಯ್ಕಕೆ ಸರಿಯಾಗಿ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಇಂದಿಗೂ ಮೂಲ ಕಸುಬುಗಳನ್ನು ಮಾಡುತ್ತಾ ಬಂದಿದ್ದಾರೆ. ಉದ್ಯೋಗದಲ್ಲಿ ವಡ್ಡರ ಸಮುದಾಯ ಹಾಗೂ ಉಪ್ಪಾರ ಸಮಾಜದ ಕಸುಬುಗಳು ಒಂದೇ ಆಗಿವೆ. ಈಗಾಗಲೇ ವಡ್ಡರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದರೆ, ಉಪ್ಪಾರರನ್ನು ಇದುವರೆಗೂ ಮೀಸಲಾತಿ ಪಟ್ಟಿಗೆ ಸೇರಿಸಿಲ್ಲ ಎಂದು ಅವರು ಕಿಡಿಕಾರಿದರು.

ಎಲ್ಲ ಸಮುದಾಯಗಳನ್ನು ಸರಿಯಾದ ಮೀಸಲಾತಿ ಪಟ್ಟಿಯಲ್ಲಿ ಸೇರಿಸಿದರೆ ಮಾತ್ರ ಸಮಾನವಾಗಿ ಎಲ್ಲರೂ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಹೀಗಾಗಿ, ಕೂಡಲೇ ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಮುಖ್ಯಮಂತ್ರಿಗಳು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಡಬೇಕು. ನಮ್ಮ ಸಮುದಾಯಕ್ಕಿರುವ ಆದಾಯ ಮಿತಿ ತೆಗೆದು ಹಾಕಬೇಕು ಅಥವಾ ಉಪ್ಪಾರ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ನೀಡಬೇಕು. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News