ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್ ತೆರವು ವಿಚಾರ: ಹೊಸ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಜ.30: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅರ್ಜಿದಾರರಾದ ಮಾಹಿತಿ ಹಕ್ಕು ಕಾರ್ಯಕರ್ತ ಸಾಯಿದತ್ತಾ ಮಂಗಳವಾರ ಹಿಂಪಡೆದಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಅನಧಿಕೃತ ಫ್ಲೆಕ್ಸ್ ಹಾಗೂ ಹೋರ್ಡಿಂಗ್ಸ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಯಿದತ್ತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಯಾವ ಯಾವ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿ, ಸೂಕ್ತ ದಾಖಲೆಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದರು.
ಬೆಂಗಳೂರಿನಲ್ಲಿ ಸಾವಿರಾರು ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್, ಭಿತ್ತಿಪತ್ರಗಳನ್ನು ಅಳವಡಿಸಲಾಗಿದ್ದರೂ ಅದನ್ನು ತೆರವುಗೊಳಿಸಲು ಸರಕಾರ ಹಾಗೂ ಬಿಬಿಎಂಪಿ ಮುಂದಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿವೆ. ಹೀಗಾಗಿ ಇವುಗಳನ್ನು ತೆರವುಗೊಳಿಸಲು ಬಿಬಿಎಂಪಿ ಹಾಗೂ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು.