×
Ad

ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಗೀತಾ ಮಹದೇವಪ್ರಸಾದ್

Update: 2018-02-03 22:46 IST

ಚಾಮರಾಜನಗರ, ಫೆ. 03 : ರಾಜ್ಯ ಸರ್ಕಾರ ಆರೋಗ್ಯ ರಕ್ಷಣೆಗಾಗಿ ಹೆಚ್ಚಿನ ಅನುದಾನವನ್ನು ವೆಚ್ಚ ಮಾಡುವ ಮೂಲಕ ಎಲ್ಲರಿಗೂ ಸಮರ್ಪಕವಾಗಿ ಆರೋಗ್ಯ ಸೇವೆಗಳನ್ನು ಒದಗಿಸಲು ಮುಂದಾಗಿದೆ ಎಂದು ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಗೀತಾ ಮಹದೇವಪ್ರಸಾದ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಸಂತೆಮರಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ನಿರ್ಮಾಣ ಮಾಡಿರುವ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಸೇವೆ ನೀಡುವ ಸಲುವಾಗಿಯೇ ಸರ್ಕಾರ ವಿಶೇಷ ಒತ್ತು ನೀಡಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯಗಳು ಲಭಿಸಬೇಕು ಎನ್ನುವ ಉದ್ದೇಶದಿಂದ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ತಾಲೂಕು ಕೇಂದ್ರ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕಗಳು ಇನ್ನು ಒಂದು ತಿಂಗಳಲ್ಲಿ ಕಾರ್ಯಾರಂಭ ಮಾಡಲಿವೆ ಎಂದರು. 

ಕಡಿಮೆ ವೆಚ್ಚದಲ್ಲಿ ಔಷಧಿ ಸಿಗಬೇಕೆಂಬ ಉದ್ದೇಶದಿಂದ ಜನರಿಕ್ ಔಷಧಿ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಸಿ.ಟಿ. ಸ್ಕ್ಯಾನ್, ಎಂ ಆರ್ ಐ ಸ್ಕ್ಯಾನ್ ಮಾಡಿಸಲು ದೊಡ್ಡ ಜಿಲ್ಲಾ ಕೇಂದ್ರಗಳಿಗೆ ತೆರಳಬೇಕಿತ್ತು. ಈ ಸೌಲಭ್ಯವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲೇ ನೀಡುವ ಉದ್ದೇಶದಿಂದ ಸಂಬಂಧಪಟ್ಟ ಕೆಲಸ ಪ್ರಕ್ರಿಯೆಯಲ್ಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ತಾಯಿ ಮತ್ತು ಮಗುವಿನ ಮರಣ ಪ್ರಮಾಣ ತಗ್ಗಿಸಬೇಕೆಂಬ ಹಿನ್ನೆಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಗುಂಡ್ಲುಪೇಟೆಯಲ್ಲಿ ಕೆಲ ತಿಂಗಳ ಹಿಂದೆ ತಾಯಿ ಮಕ್ಕಳ ಆಸ್ಪತ್ರೆ ಜನರ ಬಳಕೆಗೆ ಉದ್ಘಾಟಿಸಲಾಗಿದೆ. ಸಂತೆಮರ ಹಳ್ಳಿಯಲ್ಲಿಯೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಂತೋಷದಿಂದ ಉದ್ಘಾಟಿಸಿದ್ದು, ಜನರ ನೆರವಿಗೆ ಅನುಕೂಲವಾಗಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು. 

ಸಮಾರಂಭ ಉದ್ಘಾಟಿಸಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮ ಯಶಸ್ವಿಯಿಂದಾಗಿ ಜಿಲ್ಲೆಯಲ್ಲಿ ತಾಯಿ ಶಿಶುವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ. ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ಪರಿಣಾಮ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ತಲುಪುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ದೇಶದ 599 ಜಿಲ್ಲೆಗಳ ಪೈಕಿ 231ನೇ ಸ್ಥಾನದಲ್ಲಿದೆ ಎಂಬ ವರದಿ ಬಂದಿದೆ. ರಕ್ತಹೀನತೆಯಿಂದ ಬಳಲುವವರ ಪ್ರಮಾಣ ಶೇ. 44ರಷ್ಟು ಇದೆ. ಶೇ. 32ರಷ್ಟು ಹೆಣ್ಣುಮಕ್ಕಳು 18 ವಯಸ್ಸಿನ ಒಳಗೆ ವಿವಾಹವಾಗುತ್ತಿದ್ದಾರೆ. ಶೌಚಾಲಯ ಬಳಕೆ ಪ್ರಮಾಣವು ಕಡಿಮೆ ಇದೆ ಎಂದು ವರದಿ ಇದೆ. ಈ ಎಲ್ಲಾ ಅಂಶಗಳ ಬಗ್ಗೆಯೂ ಗಮನ ಹರಿಸಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಹಾಗೂ 18 ವರ್ಷ ತುಂಬಿದ ನಂತರವೇ ಮದುವೆ ಮಾಡುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕೆಲಸವೂ ಆಗಬೇಕಿದೆ ಎಂದು ಧ್ರುವನಾರಾಯಣ ಸಲಹೆ ಮಾಡಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎಸ್. ಜಯಣ್ಣ, ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಂತೆಮರಹಳ್ಳಿ ತಾಲೂಕು ಕೇಂದ್ರದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಸೌಲಭ್ಯ ಕಲ್ಪಿಸಲಾಗಿದೆ. ಈ ಆಸ್ಪತ್ರೆ ಮತ್ತು ಸೇವೆ ನಿಮಗಾಗಿಯೇ ಎಂಬ ಭಾವನೆ ಎಲ್ಲ ಮಹಿಳೆಯರಲ್ಲೂ ಮೂಡಿಬರಬೇಕೆಂದು ಆಶಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಜನರ ಆರೋಗ್ಯ ಕಾಳಜಿಗಾಗಿ ಸರ್ಕಾರ ಜಿಲ್ಲೆಯಲ್ಲಿ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮೀಣ ಭಾಗಗಳಲ್ಲಿಯೂ ಜನರಿಗೆ ಆರೋಗ್ಯ ಸೇವೆ ಯಾವುದೇ ತೊಂದರೆ ಇಲ್ಲದೆ ತಲುಪಿಸಬೇಕೆಂಬ ಉದ್ದೇಶದಿಂದ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಮಾಜಿ ಶಾಸಕರಾದ ಬಾಲರಾಜು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಸದಸ್ಯರಾದ ರವೀಶ್, ಮಹದೇವಯ್ಯ, ಮಹದೇವಸ್ವಾಮಿ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಟಿ.ಎಸ್. ಕುಮಾರ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News