ಬೆಂಗಳೂರು: ರೌಡಿಶೀಟರ್ ಕೊಲೆ
ಬೆಂಗಳೂರು, ಫೆ.5: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ನಗರದ ಬನಶಂಕರಿ ಠಾಣೆಯ ರೌಡಿಶೀಟರ್ ಕುಮಾರ್(30) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಯಲಚೇನಹಳ್ಳಿ ಮೆಟ್ರೊ ನಿಲ್ದಾಣ ಸಮೀಪ ಈ ಘಟನೆ ನಡೆದಿದ್ದು, ಮೃತ ಕುಮಾರ್, ರೌಡಿ ಸೈಕಲ್ ರವಿ ಸಹಚರ ಎನ್ನಲಾಗಿದೆ. ದುಷ್ಕರ್ಮಿಗಳು ಕುಮಾರ್ ನನ್ನು ನಡು ರಸ್ತೆಯಲ್ಲೇ ಅಟ್ಟಾಡಿಸಿ ದಾಳಿ ನಡೆಸಿದ್ದಾರೆ. ಈ ವೇಳೆ ಕುಮಾರ್ ಪ್ರಾಣ ಉಳಿಸಿಕೊಳ್ಳಲು ಒಂದು ಕೀ.ಮಿ. ವರೆಗೂ ಓಡಿದ್ದು, ಬೆಂಬಿಡದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.