ಬಿಜೆಪಿಯಿಂದ ಧ್ವೇಷ ಬಿತ್ತುವ ಕಾರ್ಯ: ಮಂಜುನಾಥ ಭಂಡಾರಿ
ಉಡುಪಿ, ಫೆ.5: ಬಿಜೆಪಿ ಪಕ್ಷವು ಧರ್ಮದ ಹೆಸರಿನಲ್ಲಿ ಮಹಿಳೆಯರು ಮತ್ತು ಯುವಕರಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಇದಕ್ಕೆ ಎದುರಾಗಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ವಿಚಾರಧಾರೆಯನ್ನು ಜನರ ಮುಂದಿಟ್ಟು ಅವರಿಗೆ ಮನವರಿಕೆ ಮಾಡುವ ಕಾರ್ಯ ಮಾಡಬೇಕು. ಈ ಮೂಲಕ ಅವು ಗಳನ್ನು ಮತಗಳಾಗಿ ಪರಿವರ್ತಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ವೀಕ್ಷಕ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸ ಲಾದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಮತ್ತು ವೀಕ್ಷಕರು ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಬಿಜೆಪಿ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಎಂಬುದಾಗಿ ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿಯ ಅಪಪ್ರಚಾರಕ್ಕೆ ಸರಿಯಾದ ಉತ್ತರ ನೀಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳನ್ನು ಎದುರಿಸಬೇಕು. ನಮಗೆ ನೀಡಿರುವ ಜವಾಬ್ದಾರಿಯನ್ನು ಕರ್ತವ್ಯ ಎಂಬುದಾಗಿ ಪರಿಗಣಿಸಬೇಕು. ಈ ಮೂಲಕ ಪಕ್ಷವನ್ನು ಬಲಿಷ್ಠಗೊಳಿಸಲು ಸಾಧ್ಯವಾಗುತ್ತದೆ ಎಂದರು.
ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಈ ಬಾರಿಯ ಚುನಾವಣೆಯ ಭಾಗ ವಾಗಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು. ಜನಾಭಿಪ್ರಾಯವನ್ನು ಮತಗಳಾಗಿ ಪರಿವರ್ತನೆ ಮಾಡಬೇಕು. ಅದಕ್ಕೆ ಜನರ ಮನಸ್ಸನ್ನು ಗೆಲ್ಲಬೇಕು. ಅದಕ್ಕಾಗಿ ಜನರ ಬಳಿಗೆ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಕಾರ್ಯದರ್ಶಿಗಳಾದ ಜಿ.ಎ.ಬಾವಾ, ದೇವಿಪ್ರಸಾದ್ ಶೆಟ್ಟಿ, ಮುಖಂಡರಾದ ನವೀನ್‌ಚಂದ್ರ ಶೆಟ್ಟಿ, ವರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ಅಶೋಕ್ ಕೊಡವೂರು, ಸತೀಶ್ ಅಮೀನ್ ಪಡುಕೆರೆ, ರೋಶಿನಿ ಒಲಿವೇರಾ, ಗಣೇಶ್ ಕೋಟ್ಯಾನ್, ಸುರೇಶ್ ನಾಯ್ಕಾ, ಶಂಕರ್ ಕುಂದರ್, ಶ್ಯಾಮಲಾ ಭಂಡಾರಿ, ನೀರೆ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ, ವಂಡ್ಸೆ ಸಂಜೀವ ಶೆಟ್ಟಿ, ಮನೋಹರ್ ಕರ್ಕೇರ ಮೊದ ಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ವರದಿ ವಾಚಿಸಿದರು. ಹರೀಶ್ ಕಿಣಿ ಕಾರ್ಯಕ್ರಮ ನಿರೂಪಿಸಿದರು.