ಕಾನೂನು ಬಾಹಿರ ವಾಣಿಜ್ಯ ಮಳಿಗೆ ನಿರ್ಮಾಣ: ಆಕ್ಷೇಪಣೆ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಫೆ.5: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಡಿವಾಳ ಮಾರುಕಟ್ಟೆಯಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬಿಬಿಎಂಪಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ಅರ್ಜಿಯನ್ನು ಎರಡು ವಾರಗಳ ಕಾಲ ಮುಂದೂಡಿದೆ.
ಈ ಸಂಬಂಧ ರೆಗ್ಗಿ ಥಾಮಸ್ ಮತ್ತು ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.
ಸರಕಾರದ ಪರ ವಾದಿಸಿದ ವಕೀಲರು, ಮಡಿವಾಳ ರಸ್ತೆಯ ಪಕ್ಕದಲ್ಲಿ 30 ರಿಂದ 40 ವರ್ಷಗಳಿಂದ ಸಂತೆಯಿದೆ. ಹೀಗಾಗಿ, ಬಿಬಿಎಂಪಿ 88 ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುತ್ತಿದೆ. ಇದರಿಂದ, ಸಾರ್ವಜನಿಕರಿಗೆ ಯಾವುದೆ ತೊಂದರೆ ಇಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಬಿಎಂಪಿಗೆ ಅಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.