×
Ad

ಕಾಂಗ್ರೆಸ್ ಎಡಪಕ್ಷಗಳೊಂದಿಗೆ ಒಗ್ಗೂಡಿ ವಿಶಾಲ ವೇದಿಕೆ ನಿರ್ಮಿಸಬೇಕು: ಸಿಪಿಐ

Update: 2018-02-05 21:11 IST

ಬೆಂಗಳೂರು, ಫೆ. 5: ಪ್ರಗತಿಪರ, ದಲಿತ, ರೈತ ಮತ್ತು ಎಡ ಪಕ್ಷಗಳನ್ನು ಪರಿಗಣಿಸಿ ವಿಶಾಲ ವೇದಿಕೆ ರಚಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಕೋಮುವಾದಿಗಳನ್ನು ಗೆಲ್ಲಲು ಬಿಡದಂತೆ ಚುನಾವಣಾ ತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷ ಮುಂದಾಗಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಕೇಂದ್ರ ಸಮಿತಿ ಸದಸ್ಯ ಬಿ.ವಿ.ಲೋಕೇಶ್, ರಾಜ್ಯದಲ್ಲಿ ಬಿಜೆಪಿ ಹಾಗೂ ಇನ್ನಿತರ ಕೋಮುವಾದಿ ಪಕ್ಷ ಮತ್ತು ಗುಂಪುಗಳು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಉದ್ದೇಶದಿಂದ ಅನೇಕ ಅಕ್ರಮ ಮಾರ್ಗಗಳನ್ನು ಅನುಸರಿಸುತ್ತಿವೆ. ಅನಗತ್ಯವಾಗಿ ಕೋಮುದ್ವೇಷ ಹಬ್ಬಿಸಿ ಕೋಮು ರಾಜಕಾರಣ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಮತ್ತು ದಲಿತ, ರೈತ ಪರ ಸಂಘಟನೆಗಳು ಪರಸ್ಪರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಜಾತ್ಯತೀತ ನಿಲುವುಗಳನ್ನು ಹೊಂದಿರುವ ಪಕ್ಷವನ್ನು ಅಧಿಕಾರಕ್ಕೆ ತರಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟುಗೂಡಿ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದ ಅವರು, ಈ ಕುರಿತು ಪಕ್ಷದ ರಾಜ್ಯ ಸಮ್ಮೇಳನ ಒಕ್ಕೊರಲಿನ ನಿರ್ಣಯ ಅಂಗೀಕರಿಸಿದೆ ಎಂದು ತಿಳಿಸಿದರು.

ಗೋವಾದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರಕಾರ ರಕ್ಷಣೆಗೆ ಕೇಂದ್ರ ಸರಕಾರ ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ. ಮಹಾದಾಯಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಲಯದಿಂದ ಹೊರ ಭಾಗದಲ್ಲಿ ಪ್ರಧಾನ ಮಂತ್ರಿ ಮಧ್ಯಸ್ಥಿಕೆ ವಹಿಸಿ ಇತ್ಯರ್ಥ ಪಡಿಸಬೇಕು. ಬಿಜೆಪಿ ಮತ್ತು ಕಾಂಗ್ರೆಸ್‌ನ ಕೇಂದ್ರೀಯ ನಾಯಕತ್ವ ಮೂರು ರಾಜ್ಯಗಳಲ್ಲೂ ತಮ್ಮ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ಒಮ್ಮತಕ್ಕೆ ಬರಬೇಕು ಎಂದು ಒತ್ತಾಯಿಸಿದರು.

ಭೂಕಂದಾಯ ಕಾಯ್ದೆಗೆ ತಿದ್ದುಪಡಿ ನಿರ್ಣಯ ಕೈಗೊಳ್ಳಬೇಕು. ರಾಜ್ಯಾದ್ಯಂತ ನಿರ್ವಸತಿಗರಿಗೆ ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಿ ನೀಡಬೇಕು. ರೈತರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು. ನಿರುದ್ಯೋಗ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ರಾಜ್ಯಾದ್ಯಂತ ಸರಕಾರದ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಲ್ಲಿ ಕೋಮು ಸೌಹಾರ್ದತೆ ವಾತಾವರಣ ನಿರ್ಮಿಸಲು ಸರಕಾರವನ್ನು ಒತ್ತಾಯಿಸಬೇಕು ಎಂದು ಪಕ್ಷದ ರಾಜ್ಯ ಸಮ್ಮೇಳನ ನಿರ್ಣಯಗಳನ್ನು ಅಂಗೀಕರಿಸಿದೆ ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News