ಪ್ರಧಾನಿ ಮೋದಿಯ ಆಧಾರ ರಹಿತ ಆರೋಪ: ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಫೆ.6: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ಬೆಂಗಳೂರು ಜಿಲ್ಲಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಮೌರ್ಯ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರಕಾರದ ವಿರುದ್ಧ ನರೇಂದ್ರ ಮೋದಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜಕೀಯ ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಬೆಂಗಳೂರು ಜಿಲ್ಲಾಧ್ಯಕ್ಷ ಜಿ.ಜನಾರ್ಧನ್, ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದ ಗೌರವ ಮರೆತು ಬಿಜೆಪಿಯ ಭ್ರಷ್ಟರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಸುಳ್ಳು ಭಾಷಣ ಮಾಡಲು ಬಿಜೆಪಿ ನಾಯಕರು ಪ್ರೇರಣೆಯಾಗಿದ್ದಾರೆ ಎಂದು ಆಪಾದಿಸಿದರು.
ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ನಂಗನಾಚ್ ಎಂಬ ಪದ ಬಳಸಿ ದೇಶದ ಜನತೆಯನ್ನು ಅವಮಾನಿಸಿದ್ದಾರೆ. ಪ್ರಧಾನಿ ಸ್ಥಾನದ ಘನತೆಗೆ ಧಕ್ಕೆ ತಂದಿದ್ದಾರೆ. ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಸೇರಿದ್ದರು. ಆದರೆ, ಅದನ್ನೆಲ್ಲಾ ಮರೆತು ಕಾಂಗ್ರೆಸ್ ಮೇಲೆ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ರಾಜ್ಯ ಸರಕಾರದ ಜನಪ್ರಿಯ ಯೋಜನೆ ಅಭಿವೃದ್ದಿಯ ಪ್ರಗತಿಯನ್ನು ಕಂಡು ಮೋದಿ ಭಯಗೊಂಡಿದ್ದಾರೆ. ಮೋದಿ ನಾಯಕತ್ವವನ್ನು ಈಗಾಗಲೇ ಗುಜರಾತ್, ರಾಜಸ್ಥಾನದ ಮತದಾರರು ತಿರಸ್ಕರಿಸಿದ್ದಾರೆ. ಹೀಗಾಗಿ, ಮೋದಿ ಅಭಿವೃದ್ಧಿ ಬಗ್ಗೆ ಮಾತನಾಡದೆ ಬೇಜಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.