ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಕಠಿಣ ಶಿಕ್ಷೆ
ತುಮಕೂರು.ಫೆ.07: 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಇಲ್ಲಿನ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2015 ರಲ್ಲಿ ಪಾವಗಡ ತಾಲೂಕಿನ ಗ್ರಾಮವೊಂದರ ಬಳಿ ತಿಪ್ಪೇಸ್ವಾಮಿ (60) ಹಾಗೂ ಮಲ್ಲಪ್ಪ (35) ಎಂಬವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಗುರುಸ್ವಾಮಿ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯು ತುಮಕೂರಿನ ನ್ಯಾಯಾಲಯದಲ್ಲಿ ನಡೆದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ ಕಲಂ 6 ರ ಅಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ.ಗಳ ದಂಡ, ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಪುನಃ 2 ವರ್ಷಗಳ ಕಾಲ ಕಾರಾಗೃಹ ವಾಸ ಅನುಭವಿಸಲು ತೀರ್ಪಿನಲ್ಲಿ ತಿಳಿಸಲಾಗಿದೆ. ದಂಡದ ಹಣದಲ್ಲಿ 40 ಸಾವಿರ ರೂ.ಗಳನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರಾದ ಪಿ.ಟಿ.ಕಟ್ಟಿಮನಿ ಆದೇಶಿಸಿದ್ದಾರೆ.
ಪ್ರಕರಣ ವಿಚಾರಣಾ ಹಂತದಲ್ಲಿದ್ದಾಗ ತಿಪ್ಪೇಸ್ವಾಮಿ ಮೃತಪಟ್ಟಿದ್ದರು. ಉಳಿದಂತೆ ಮತ್ತೊಬ್ಬ ಆರೋಪಿ ಮಲ್ಲಪ್ಪನಿಗೆ ಶಿಕ್ಷೆ ಜಾರಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಅಭಿಯೋಜಕರಾದ ಶ್ರೀಮತಿ ಹಾಗೂ ಪೋಕ್ಸೋ ನ್ಯಾಯಾಲಯದ ವಿಶೇಷ ಅಭಿಯೋಜಕ ಗಾಯತ್ರಿ ರಾಜು ವಾದಿಸಿದ್ದರು.