ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸಿ: ಪಿ.ಐ.ಶ್ರೀವಿದ್ಯಾ ಸೂಚನೆ
ಮಡಿಕೇರಿ, ಫೆ.7: ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಕುರಿತು ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವಿಸಬೇಕು, ಇತರರಂತೆ ಬದುಕು ಕಟ್ಟಿಕೊಳ್ಳಲು ಅಗತ್ಯ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸ್ವಂತ ಉದ್ದಿಮೆ ಸ್ಥಾಪಿಸಲು, ಆರ್ಥಿಕ ಸ್ವಾವಲಂಬನೆ ಹೊಂದಲು ಹಾಗೂ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಲು ಸರ್ಕಾರದ ಕಾರ್ಯಕ್ರಮ ತಲುಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳ ಬಗ್ಗೆ ಸರ್ಕಾರದ ಜೊತೆಗೆ ಸರ್ಕಾರೇತರ ಸಂಸ್ಥೆಗಳು ಮಾಹಿತಿ ನೀಡುವಂತಾಗಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಟೈಲರಿಂಗ್, ಬ್ಯೂಟಿಷಿಯನ್ ಮತ್ತಿತರ ತರಬೇತಿ ನೀಡುವಂತೆ ಪಿ.ಐ.ಶ್ರೀವಿದ್ಯಾ ಅವರು ಸಲಹೆ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ ಅವರು ಮಾತನಾಡಿ, ಪ್ರಸಕ್ತ ಸಾಲಿನ ಬಜೆಟ್ ಘೋಷಣೆ ಮಾಡಿರುವಂತೆ ಪ್ರತಿ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 25 ಸಾವಿರ ರೂ ಸಾಲ ಹಾಗೂ 25 ಸಾವಿರ ರೂ ಸಹಾಯಧನವನ್ನು ಸರ್ಕಾರದಿಂದ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಹಲವು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ದಮಯಂತಿ (ಮಡಿಕೇರಿ) ಮಹೇಶ್ (ಸೋಮವಾರಪೇಟೆ) ಲೀಲಾವತಿ(ವಿರಾಜಪೇಟೆ), ಸಮಾಲೋಚಕರಾದ ಕೆ.ಎಲ್.ಪ್ರಿಯ ಇತರರು ಹಾಜರಿದ್ದರು