ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ: ಸಿ.ಎಂ ಸಿದ್ದರಾಮಯ್ಯ

Update: 2018-02-09 13:34 GMT

ದಾವಣಗೆರೆ,ಫೆ.09: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೇ ಸ್ವತಂತ್ರವಾಗಿ ಕಣಕ್ಕೆ ಇಳಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರದ ಹೆಲಿಪ್ಯಾಡಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವುದೇ ಪಕ್ಷದವರು ಹೊಂದಾಣಿಕೆ ಮಾಡಿಕೊಳ್ಳಲಿ, ಅದಕ್ಕೆ ನಾನು ಉತ್ತರ ನೀಡುವುದಿಲ್ಲ. ಆದರೆ  ನಮ್ಮ ಪಕ್ಷಕ್ಕೆ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯ ಇಲ್ಲ. ಕೇಂದ್ರದಲ್ಲಿ ಸೋನಿಯಾ ಗಾಂಧೀಯವರು ತೃತಿಯ ರಂಗದ ಬಗ್ಗೆ ಒಲವು ತೋರಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ವಿಧಾನಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಯಲೂಬಹುದು. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸರ್ವೆ ನಡೆಯುತ್ತಿದ್ದು, ಪಕ್ಷದ ವೀಕ್ಷಕರು ಈ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

2006 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಧಾರ್ಮಿಕ ದತ್ತಿ ಕಾಯ್ದೆಯನ್ನು ರದ್ದು ಪಡಿಸಿ, ಹೊಸ ಕಾನೂನು ರೂಪಿಸುವಂತೆ ಸೂಚನೆ ನೀಡಿತ್ತು. ಈ ಬಗ್ಗೆ ಅಭಿಪ್ರಾಯ ಕೇಳಲು ಪ್ರಕಟಣೆ ಹೊರಡಿಸಲಾಗಿದೆಯೇ ಹೊರತು ಇದು ಸರ್ಕಾರ ಆದೇಶವಲ್ಲ. ಆದರೆ, ಇಂತದ್ದೇ ಪ್ರಕಟಣೆಯನ್ನು ನ್ಯಾಯಮೂರ್ತಿ ರಾಮಾಜೋಯಿಸ್ ಅಧ್ಯಕ್ಷತೆಯ ಸಮಿತಿ ಬಿಜೆಪಿ- ಜೆಡಿಎಸ್ ಅಧಿಕಾರದ  ಅವಧಿಯಲ್ಲೂ ಹೊರಡಿಸಿತ್ತು . ಅದೇ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಕಳೆದ 5 ದಿನಗಳಿಂದ ಬಿಸಿಯೂಟ ಕಾರ್ಯಕರ್ತೆಯರು ವೇತನ ಹೆಚ್ಚಳ ಸಂಬಂಧ ಬೆಂಗಳೂರಿನಲ್ಲಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸುವಂತೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಮತ್ತು ಸಚಿವೆ ಉಮಾಶ್ರಿಯವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News