ಅಜಿತಾಬ್ ನಾಪತ್ತೆ ಪ್ರಕರಣ ಹೆಚ್ಚುವರಿಯಾಗಿ ಸಿಸಿಬಿಗೂ ವಹಿಸಲಾಗಿದೆ: ಹೈಕೋರ್ಟ್‌ಗೆ ನಗರ ಪೊಲೀಸ್ ಆಯುಕ್ತರಿಂದ ಹೇಳಿಕೆ
ಬೆಂಗಳೂರು, ಫೆ.9: ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಜೊತೆಗೆ ಹೆಚ್ಚುವರಿಯಾಗಿ ಸಿಸಿಬಿಗೂ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಅಜಿತಾಬ್ ನಾಪತ್ತೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠಕ್ಕೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ಪ್ರಮಾಣಪತ್ರ ಸಲ್ಲಿಸಿ ಈ ಮಾಹಿತಿ ನೀಡಿದರು.
ಪ್ರಕರಣದಲ್ಲಿ ತನಿಖೆಗೆ ಈಗಾಗಲೇ ಎಸ್‌ಐಟಿ ರಚನೆ ಮಾಡಲಾಗಿದೆ. ಅಲ್ಲದೆ, ಕೋರ್ಟ್ ಸಲಹೆ ಮೇರೆಗೆ ಪ್ರಕರಣದ ತನಿಖೆಯನ್ನು ಹೆಚ್ಚುವರಿಯಾಗಿ ಸಿಸಿಬಿಗೂ ವಹಿಸಲಾಗಿದೆ. ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಆದರೆ, ಈವರೆಗೂ ಪ್ರಕರಣವನ್ನು ಭೇದಿಸದ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ತನಿಖೆಯ ಪ್ರಗತಿ ವರದಿ ಸಲ್ಲಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಒಂದು ವಾರ ಮುಂದೂಡಿದರು.
ಪ್ರಕರಣವೇನು: ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ 2017ರ ಡಿ.18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ಅಜಿತಾಬ್ ತಂದೆ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಮಗ ಪತ್ತೆಯಾಗದ ಕಾರಣ ಹೈಕೋರ್ಟ್ ಮಟ್ಟಿಲೇರಿರುವ ತಂದೆ ಅಶೋಕ್ ಕುಮಾರ್ ಸಿನ್ಹಾ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.