ಜಾತಿ-ಧರ್ಮದ ಆಧಾರದ ಮೇಲೆ ಬಿಜೆಪಿ ರಾಜಕೀಯ: ಸಿಎಂ ಸಿದ್ದರಾಮಯ್ಯ

Update: 2018-02-10 13:14 GMT

ಬೆಂಗಳೂರು, ಫೆ. 10: ‘ಕಾಂಗ್ರೆಸ್ ಪಕ್ಷ ಎಂದಿಗೂ ಜಾತಿ-ಧರ್ಮದ ಆಧಾರದ ಮೇಲೆ ರಾಜಕೀಯ ಮಾಡಲಿಲ್ಲ. ಆದರೆ, ಬಿಜೆಪಿ ಮುಖಂಡರು ಜಾತಿ-ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರ ಜನ್ಮ ದಿನಾಚರಣೆ ಅಂಗವಾಗಿ ಪಶ್ಚಿಮದ್ವಾರದಲ್ಲಿರುವ ಅವರ ಪುತ್ಥಳಿ ಬಳಿಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಸಹಬಾಳ್ವೆಗಾಗಿ ಹೋರಾಟ ನಡೆಸಿದಂತಹ ಮಹಾತ್ಮಾ ಗಾಂಧೀಜಿಯವರನ್ನು ಕೊಂದು ಹಾಕಿದವರಿಂದ ದೇಶದ ಐಕ್ಯತೆ, ಸಮಗ್ರತೆ, ಜಾತ್ಯತೀತದ ಬಗ್ಗೆ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ ಅವರು, ನೆಹರು ಕುಟುಂಬ ಎಂದಿಗೂ ಜಾತಿ ಅಥವಾ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ. ಇಡೀ ದೇಶ ಅವರ ಕುಟುಂಬ ಎಂದರು.

ಮುಸಲ್ಮಾನರು ಈ ದೇಶದಲ್ಲಿ ಇರುವುದು ಬೇಡ ಎಂದು ಹೇಳುವ ಬಿಜೆಪಿಯವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ವಿರೋಧಿಗಳು ಎಂದ ಅವರು, ಸಿಬಿಐ, ಐಟಿ ದುರ್ಬಳಕೆ ಮಾಡಿಕೊಂಡು ವಿರೋಧಿಗಳನ್ನು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ 60 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ, ಎಂದಿಗೂ ಸಿಬಿಐ, ಐಟಿ ಸೇರಿದಂತೆ ಸರಕಾರಿ ಸ್ವಾಮ್ಯದ ಇಲಾಖೆಗಳನ್ನು ಎಂದಿಗೂ ದುರುಪಯೋಗ ಮಾಡಿಕೊಂಡ ನಿದರ್ಶನಗಳಿಲ್ಲ ಎಂದು ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೊಳಚೆ ಪ್ರದೇಶದಲ್ಲಿ ಈಗ ವಾಸ್ತವ್ಯ ಮಾಡುತ್ತಿದ್ದಾರೆ. ಆದರೆ, ಅವರು ಮುಖ್ಯಮಂತ್ರಿ ಆಗಿದ್ದಾಗ ಎಷ್ಟು ಬಾರಿ ಕೊಳಚೆ ಪ್ರದೇಶದಲ್ಲಿ ಮಲಗಿದ್ದರು ಎಂದು ಪ್ರಶ್ನಿಸಿದ ಅವರು, ಇದೆಲ್ಲ ರಾಜಕೀಯ ಎಂಬುದು ಜನರಿಗೆ ಗೊತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ 60 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ, ಎಂದಿಗೂ ಸಿಬಿಐ, ಐಟಿ ಸೇರಿದಂತೆ ಸರಕಾರಿ ಸ್ವಾಮ್ಯದ ಇಲಾಖೆಗಳನ್ನು ಎಂದಿಗೂ ದುರುಪಯೋಗ ಮಾಡಿಕೊಂಡ ನಿದರ್ಶನಗಳಿಲ್ಲ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News