ಭಾರತೀಯ ಪ್ರಜೆಗಳ ಪಕ್ಷದಿಂದ ಚುನಾವಣೆಗೆ ಸಜ್ಜು

Update: 2018-02-10 12:47 GMT

ಬೆಂಗಳೂರು, ಫೆ. 10: ರಾಜ್ಯದಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಪ್ರಜೆಗಳ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಶಿವರಾಮಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎಲ್ಲ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ಸ್ವಾತಂತ್ರ 7 ದಶಕಗಳು ಕಳೆದರೂ ಸಾಮಾನ್ಯ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷಗಳ ಡೋಂಗಿತನವನ್ನು, ಜನವಿರೋಧಿ ನೀತಿಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಪರ್ಯಾಯ ರಾಜಕಾರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಾಮಾಣಿಕರಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರ ಜನಪರವಾದ ಯೋಜನೆಗಳನ್ನು ಜಾರಿ ಮಾಡುವ ಬದಲಿಗೆ, ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದ್ದಾರೆ. ಅಲ್ಲದೆ, ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ವಂಚಿಸುತ್ತಿದ್ದಾರೆ. ರಾಜ್ಯ ಸರಕಾರ ಜನರಿಗೆ ಉಪಯೋಗಕ್ಕೆ ಬರುವ ದೀರ್ಘಕಾಲೀನ ಯೋಜನೆಗಳನ್ನು ಜಾರಿ ಮಾಡುವ ಬದಲಿಗೆ ಕೇವಲ ಅವಕಾಶವಾದಿತನವನ್ನು ಪ್ರದರ್ಶಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಾಲ ಮನ್ನಾ, ಮಹಾದಾಯಿ ವಿವಾದ ಶೀಘ್ರ ಇತ್ಯರ್ಥ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳು ಜಾರಿ ಹಾಗೂ ನಾಡು-ನುಡಿ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News