ಗಣಿಗ ರವಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಮಂಡ್ಯ, ಫೆ.10: ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿತ ಅಭ್ಯರ್ಥಿ ಗಣಿಗ ರವಿಕುಮಾರ್ ಖಾಸಗಿ ಕಾರ್ಯಕ್ರಮದ ಹೆಸರಿನಲ್ಲಿ ನಗರದಲ್ಲಿ ಸಾರ್ವಜನಿಕರು ಹಾಗೂ ನಾಗರಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿ ಮುಖಂಡ ಲೋಕೇಶ್ ಆಚಾರ್ ಎಂಬುವರು ಆನ್‍ಲೈನ್ ಮೂಲಕ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ರವಿಕುಮಾರ್ ಖಾಸಗಿ ಕಾರ್ಯಕ್ರಮಕ್ಕಾಗಿ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ವಿಶಾಲವಾದ ಗಾತ್ರದ ಸ್ಟೇಜ್‍ಗಳನ್ನು ಹಾಕಿರುವ ಹಿನ್ನೆಲೆಯಲ್ಲಿ ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ವಾಯುವಿಹಾರಿಗಳಿಗೆ ಮೂರುದಿನದಿಂದಲೂ ತೊಂದರೆಯಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಇದಲ್ಲದೆ, ಬೆಂಗಳೂರು ಮೈಸೂರು ಹೆದ್ದಾರಿಯ ಸಂಜಯ ವೃತ್ತ, ಮತ್ತಿತರ ಕಡೆ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ. ಹಾಗೆಯೇ ರಸ್ತೆಮಧ್ಯೆಯ ವಿದ್ಯುತ್ ಕಂಬಗಳಿಗೆ ಮೈಕ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ಕೊಡಲಾಗಿದೆ ಎಂದು ಅವರು ದೂರಿದ್ದಾರೆ.
ರವಿಕುಮಾರ್, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.