×
Ad

ನಾಗಾಲ್ಯಾಂಡ್ ಚುನಾವಣೆ: ಜಾತ್ಯತೀತ ಅಭ್ಯರ್ಥಿಗಳನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ

Update: 2018-02-12 20:54 IST

ಕೊಹಿಮಾ, ಫೆ.12: ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷವು ಮೇಲುಗೈ ಸಾಧಿಸುವುದನ್ನು ತಡೆಯುವ ನಿಟ್ಟಿನಲ್ಲಿ ತಾನು ಸ್ಪರ್ಧಿಸದ ಕ್ಷೇತ್ರಗಳಲ್ಲಿ ಜಾತ್ಯತೀತ ಅಭ್ಯರ್ಥಿಯನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದೆ.

ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯು ಫೆಬ್ರವರಿ 27ರಂದು ನಡೆಯಲಿದೆ. ಇಲ್ಲಿನ 60 ವಿಧಾನಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 19ರಲ್ಲಿ ಸ್ಪರ್ಧಿಸಲಿದೆ. ಆರಂಭದಲ್ಲಿ ಕಾಂಗ್ರೆಸ್‌ನ 20 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೂ ಕೊನೆಯ ಹಂತದಲ್ಲಿ ಓರ್ವ ಅಭ್ಯರ್ಥಿ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಬಿಜೆಪಿ ಮತ್ತದರ ಮಿತ್ರಪಕ್ಷವು ನಾಗಾಲ್ಯಾಂಡ್‌ನ ಜನರ ಹಕ್ಕುಗಳ ಜೊತೆ ಮತ್ತು ಜೀವನಶೈಲಿಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ಕಾಂಗ್ರೆಸ್ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ನಾಗಾಲ್ಯಾಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿ ಬಿಜೆಪಿಯು ಮಾಜಿ ಮುಖ್ಯಮಂತ್ರಿ ಮತ್ತು ಹಾಳಿ ಸಂಸದ ನೈಫಿಯು ರಿಯೊ ನೇತೃತ್ವದ ರಾಷ್ಟ್ರೀಯ ಪ್ರಜಾಸತಾತ್ಮಕ ಪ್ರಗತಿಪರ ಪಕ್ಷ (ಎನ್‌ಡಿಪಿಪಿ)ದ ಜೊತೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಮತ್ತು ಎನ್‌ಡಿಪಿಪಿ ಕ್ರಮವಾಗಿ 20 ಮತ್ತು 40 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಎನ್‌ಡಿಪಿಪಿ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿರುವ ಕಾಂಗ್ರೆಸ್, ಮಾಜಿ ಮುಖ್ಯಮಂತ್ರಿಗಳು ತಮ್ಮ ರಾಜ್ಯದ ಜನತೆಯ ಅಳಲು ಮತ್ತು ಭಯವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News