ಬೆಂಗಳೂರು: ಶ್ವಾನಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಕೇಂದ್ರ ಉದ್ಘಾಟನೆ

Update: 2018-02-14 15:45 GMT

ಬೆಂಗಳೂರು, ಫೆ. 14: ಇಲ್ಲಿನ ಎಂ.ಎಸ್.ಪಾಳ್ಯದ ಮುಖ್ಯರಸ್ತೆಯಲ್ಲಿನ ಮೇಡಿ ಅಗ್ರಹಾರದಲ್ಲಿ ಪ್ರಾಣಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಕೇಂದ್ರದ ಕಟ್ಟಡವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಉದ್ಘಾಟಿಸಿದರು.

ಬುಧವಾರ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಈ ಕಟ್ಟಡವನ್ನು ಅತ್ಯಾಧುನಿಕ ರೀತಿಯಲ್ಲಿ ನಿರ್ಮಿಸಿದ್ದು, ಪ್ರಾಣಿಗಳಿಗೆ ಶಸ್ತ್ರಚಿಕಿತ್ಸೆ ಕೊಠಡಿಯನ್ನು ಪ್ರತ್ಯೇಕವಾಗಿ ನಿರ್ಮಿಸಲಾಗಿದೆ. ಅಲ್ಲದೆ, ಉನ್ನತ ಉಪಕರಣವನ್ನು ಅಳವಡಿಸಲಾಗುವುದು ಎಂದರು.

ಈ ಪ್ರದೇಶವು ಒಟ್ಟಾರೆ 3 ಎಕರೆ ವ್ಯಾಪ್ತಿಯಲ್ಲಿ ಒಳಗೊಂಡಿದ್ದು, ಈ ಆಧುನಿಕ ಕಟ್ಟಡವನ್ನು 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರಿಂದಾಗಿ ಯಲಹಂಕ ವಲಯದ ವ್ಯಾಪ್ತಿಯಲ್ಲಿರುವ ಬೀದಿ ಶ್ವಾನಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಉಪಯೋಗವಾಗಲಿದೆ ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಎಲ್ಲ ವಲಯಗಳಲ್ಲಿ ಇಂತಹ ಕೇಂದ್ರಗಳನ್ನು ಉನ್ನತೀಕರಿಸಬೇಕು. ಅಲ್ಲದೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೆ.ಜೆ.ಜಾರ್ಜ್ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News