ವೈದ್ಯಕೀಯ ಪಿಜಿ ಸೀಟುಗಳ ಹಂಚಿಕೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

Update: 2018-02-15 15:34 GMT

ಬೆಂಗಳೂರು, ಫೆ.15: ರಾಜ್ಯ ಸರಕಾರದ ವೈದ್ಯಕೀಯ ಶಿಕ್ಷಣ ಇಲಾಖೆ ತನ್ನ ವೈದ್ಯಕೀಯ ಸ್ನಾತಕೋತ್ತರ ಪದವಿ ಅಧ್ಯಯನದ ಸೀಟುಗಳನ್ನು ಹಂಚುವಾಗ ಅನುಸರಿಸುವ ನಿಯಮಗಳು ಕರ್ನಾಟಕ ಮೂಲದ ಅಭ್ಯರ್ಥಿಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ರೂಪಿತವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ಗೆ ಪತ್ರ ಬರೆದಿರುವ ಅವರು, ನೆರೆ ರಾಜ್ಯದ ಪದವಿ ಅಧ್ಯಯನ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳೆಂದೆ ಪರಿಗಣಿಸುವ ಮೂಲಕ ಅವರಿಗೆ ವೈದ್ಯಕೀಯ ಸ್ನಾತಕೋತ್ತರ ಪದವಿಯ ದಾಖಲಾತಿಯನ್ನು ಕಲ್ಪಿಸಿಕೊಡುವಲ್ಲಿ ಅರ್ಹತೆಯನ್ನು ನೀಡಲಾಗುತ್ತಿದೆ. ಇದು ಸ್ಥಳೀಯ ಅಭ್ಯರ್ಥಿಗಳಿಗೆ ತೀವ್ರತರವಾದ ಸ್ಪರ್ಧೆಯನ್ನು ಒಡ್ಡಿದೆ ಎಂದರು.

ನೆರೆ ರಾಜ್ಯಗಳಲ್ಲಿ ಆಯಾ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಾತಿನಿಧ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಎಂಬಿಬಿಎಸ್ ಶಿಕ್ಷಣವನ್ನು ಮಹಾರಾಷ್ಟ್ರದಲ್ಲಿಯೇ ಓದಿರಬೇಕು ಹಾಗೂ ಮಹಾರಾಷ್ಟ್ರದಲ್ಲಿ ನೆಲೆಸಿರಬೇಕೆಂದು ಕಡ್ಡಾಯ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸ್ಥಳೀಯ ಮೂಲದ ವಿದ್ಯಾರ್ಥಿಗಳಿಗೆ ವಿಶೇಷವಾದ ಪ್ರಾತಿನಿಧ್ಯವನ್ನು ಕಲ್ಪಿಸಲಾಗಿದೆ. ಉತ್ತರಪ್ರದೇಶ, ಗುಜರಾತ್ ಸೇರಿದಂತೆ ಬಹುಪಾಲು ರಾಜ್ಯಗಳು ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಕಲ್ಪಿಸಿವೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ರಾಜ್ಯದಲ್ಲಿ ಸ್ಥಳೀಯ ಕನ್ನಡಿಗ ವಿದ್ಯಾರ್ಥಿಗಳನ್ನು ಅವಕಾಶ ವಂಚಿತರನ್ನಾಗಿ ಮಾಡುವ ನಿಯಮಗಳನ್ನು ರೂಪಿಸಿರುವುದು ವಿಷಾದನೀಯವಾದ ಅಂಶ. ಸಂಬಂಧಿಸಿದ ಅಧಿಕಾರಿಗಳು ಈ ನ್ಯೂನತೆಯ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸದ್ಯದಲ್ಲಿಯೇ ಬಿಡುಗಡೆಯಾಗಲಿರುವ ಸ್ನಾತಕೋತ್ತರ ಪದವಿ ಅಧ್ಯಯನ ಸೀಟುಗಳ ಪಟ್ಟಿಯಲ್ಲಿ ಸ್ಥಳೀಯ ಕನ್ನಡಿಗ ವಿದ್ಯಾರ್ಥಿಗಳಿಗೆ ಅಗತ್ಯ ಮೀಸಲಾತಿಯನ್ನು ಕಲ್ಪಿಸುವ ಮೂಲಕ ನಮ್ಮ ನೆಲದ ಜನರಿಗೆ ಪ್ರಥಮ ಪ್ರಾಶಸ್ತ್ಯವನ್ನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ರೀತಿಯ ನೆಲವಿರೋಧಿ ನಿಯಮಗಳನ್ನು ರೂಪಿಸುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಸರಕಾರವು ಕನ್ನಡಪರವಾದ ಆಡಳಿತವನ್ನು ನಡೆಸುತ್ತಿದೆ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಡಾ.ಸರೋಜಿನಿ ಮಹಿಷಿ ವರದಿಯನ್ವಯ ಕಡ್ಡಾಯವಾಗಿ ರಾಜ್ಯದಲ್ಲಿ ಕನಿಷ್ಠ 15 ವರ್ಷಗಳು ನೆಲೆಸಿರಬೇಕೆಂದು ಹಾಗೂ ರಾಜ್ಯದ ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಪಡೆದಿರಬೇಕೆಂಬ ನಿಯಮವನ್ನು ಅಳವಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ಪಾಟೀಲ್‌ಗೆ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News