ಶೀಘ್ರದಲ್ಲೆ 362 ಮಳಿಗೆಗಳ ಅಭಿವೃದ್ಧಿ: ರಾಮಲಿಂಗಾರೆಡ್ಡಿ

Update: 2018-02-16 16:17 GMT

ಬೆಂಗಳೂರು, ಫೆ.16: ನಗರದ ಮಡಿವಾಳ ಮಾರುಕಟ್ಟೆಯಲ್ಲಿನ 362 ಮಳಿಗೆಗಳನ್ನು ಅಭಿವೃದ್ಧಿಪಡಿಸಿ ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ನಗರದ ಮಡಿವಾಳದಲ್ಲಿ ಸುಮಾರು 7ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ ಮಡಿವಾಳ ಮಾರುಕಟ್ಟೆ ಸಂಕೀರ್ಣವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು. ಮಡಿವಾಳ ಮಾರುಕಟ್ಟೆ ತನ್ನದೇ ಆದ ಇತಿಹಾಸ ಹೊಂದಿದೆ. ಸುಮಾರು 25 ವರ್ಷಗಳ ಹಿಂದೆ 37 ಮಳಿಗೆಗಳಲ್ಲಿ ವ್ಯಾಪಾರ ನಡೆಸಲಾಗುತ್ತಿತ್ತು. ಆದರೀಗ ಮಳಿಗೆಗಳ ಸಂಖ್ಯೆ ಸುಮಾರು 450 ಆಗಿವೆ. ಅಲ್ಲದೇ ಈಗಿನ ಕಾಲಕ್ಕೆ ತಕ್ಕಂತೆ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂದು ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಸುಮಾರು 88 ಮಳಿಗೆಗಳನ್ನು ನಿರ್ಮಿಸಿ ಇಂದು ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲಾಗುತ್ತಿದೆ. ಇನ್ನುಳಿದ 362 ಮಳಿಗೆಗಳನ್ನು ಶೀಘ್ರವಾಗಿ ಅಭಿವೃದ್ಧಿ ಪಡಿಸಿ ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲಾಗುವುದು ಎಂದರು.

ಮಳಿಗೆಗಳ ಅಭಿವೃದ್ಧಿ ಕಾಮಗಾರಿಗೆ 35 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಮಡಿವಾಳ ಮಾರುಕಟ್ಟೆ ನಗರದ ಅತಿ ದೊಡ್ಡ ಮಾರುಕಟ್ಟೆಯಾಗಿ ಪರಿವರ್ತನೆಯಾಗಲಿದೆ ಎಂದ ಅವರು, ರೈತರು ಬೆಳೆದೆ ಹಣ್ಣು, ತರಕಾರಿಗಳನ್ನು ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನೊಳಗೊಂಡ ವಿಶಾಲ ಪ್ರಾಂಗಣ ನಿರ್ಮಿಸಲಾಗಿದೆ. ಇದರಿಂದಾಗಿ ನಗರದ ನಾಗರಿಕರಿಗೆ ಉತ್ತಮ ಗುಣಮಟ್ಟದ ತರಕಾರಿಗಳು, ಹಣ್ಣು, ಹೂವು ಸೇರಿದಂತೆ ಇನ್ನಿತರ ವಸ್ತುಗಳು ದೊರಕಲಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಮೇಯರ್ ಸಂಪತ್‌ರಾಜ್ ಮಾತನಾಡಿ, ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಡಿವಾಳ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ. ಇದೇ ಮಾದರಿಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಮಾರುಕಟ್ಟೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಮೇಯರ್, ಪಾಲಿಕೆ ಸದಸ್ಯ ಬಿ.ಎನ್.ಮಂಜುನಾಥ ರೆಡ್ಡಿ, ಆಡಳಿತ ಪಕ್ಷದ ನಾಯಕ ಎಮ್.ಶಿವರಾಜು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News