ಶೇ.10 ರಷ್ಟು ಕ್ಷೇತ್ರಗಳು ಮಹಿಳೆಯರಿಗೆ ಮೀಸಲು: ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಲತಾ

Update: 2018-02-17 11:52 GMT

ಮಡಿಕೇರಿ, ಫೆ.17: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಶೇ.10 ರಷ್ಟು ಕ್ಷೇತ್ರಗಳನ್ನು ಮಹಿಳೆಯರಿಗಾಗಿ ಮೀಡಲಿಡಲು ನಿರ್ಧರಿಸಿದ್ದು, ಪಕ್ಷದ ಏಳಿಗೆಗಾಗಿ ಶ್ರಮಿಸಿದವರಿಗೆ ಸ್ಪರ್ಧಿಸಲು ಅವಕಾಶ ಸಿಗಲಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾದ ಲತಾ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಮಹಿಳಾ ಮೋರ್ಚಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನಲ್ಲಿ  ಮಾ.7 ರಂದು ರಾಜ್ಯ ಮಹಿಳಾ ಮೋರ್ಚಾದ ಬೃಹತ್ ಸಮಾವೇಶ ನಡೆಯಲಿದ್ದು, ಜಿಲ್ಲೆಯ ಬಿಜೆಪಿ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಜಿಲ್ಲೆಯಲ್ಲಿ ಮಹಿಳಾ ಮೋರ್ಚಾವನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಮಹಿಳಾ ಮೋರ್ಚಾದ ಉಸ್ತುವಾರಿ ವಹಿಸಿದ್ದ ಗೀತಾಂಜಲಿ ಸುವರ್ಣ ಮೋರ್ಚಾದ ಸಭೆ ನಡೆಸದಿರುವುದು ಕಂಡು ಬಂದಿದೆ. ಈ ಬಗ್ಗೆ ಮಹಿಳಾ ಮೋರ್ಚಾದ ರಾಜ್ಯ ಉಸ್ತುವಾರಿ ಭಾರತಿಶೆಟ್ಟಿ ಅವರ ಗಮನ ಸೆಳೆದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕಿದೆ. ರಾಜ್ಯ ಸರ್ಕಾರ ದುರಾಡಳಿತ ನಡೆಸುತ್ತಿದ್ದು, ಬಿಜೆಪಿ ಒಗ್ಗಟ್ಟಿನ ಹೋರಾಟದ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳಾ ಮೋರ್ಚಾದ ಎಲ್ಲಾ ಕಾರ್ಯಗಳಿಗೆ ಜಿಲ್ಲಾ ಬಿಜೆಪಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು. 

ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಯುಮುನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಗೀತಾ ಪವಿತ್ರ. ನಗರಾಧ್ಯಕ್ಷರಾದ ಅನಿತಾಪೂವಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕಾಂತಿ ಸತೀಶ್, ಸುಮಾಸುದೀಪ್, ಭುವನೇಶ್ವರಿ, ಕವಿತಾ ಬೆಳ್ಯಪ್ಪ, ನಗರಸಭಾ ಸದಸ್ಯರಾದ ಲಕ್ಷ್ಮಿ ಮತ್ತಿತರ ಪ್ರಮುಖರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News