ಒಣ ಬೇಸಾಯದ ರೈತರಿಗೆ ಸರಕಾರದಿಂದ ಪ್ರೋತ್ಸಾಹ ಧನ: ವಿನಯ್ ಕುಲಕರ್ಣಿ

Update: 2018-02-17 13:14 GMT

ಧಾರವಾಡ, ಫೆ.17: ಇತಿಹಾಸದಲ್ಲಿ ಪ್ರಥಮ ಬಾರಿಗೆ ಒಣ ಬೇಸಾಯದ ರೈತರಿಗೆ ಪ್ರತಿ ಎಕರೆಗೆ ಎರಡು ಸಾವಿರದಂತೆ ಗರಿಷ್ಠ ಐದು ಎಕರೆಯವರೆಗೆ ಪ್ರೋತ್ಸಾಹ ಧನವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ಯೋಜನೆಯನ್ನು ಈ ವರ್ಷದ ಬಜೆಟ್‌ನಲ್ಲಿ ನಮ್ಮ ಸರಕಾರ ಘೋಷಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.

ಶನಿವಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರವು 2013ರಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ 165 ಭರವಸೆಗಳಲ್ಲಿ ಇಲ್ಲಿಯವರೆಗೆ 158 ಭರವಸೆಗಳನ್ನು ಈಡೇರಿಸಿದೆ. ಇತಿಹಾಸದಲ್ಲಿ ಪ್ರಥಮ ಬಾರಿಗೆ ನುಡಿದಂತೆ ನಡೆದ ಸರಕಾರ ನಮ್ಮದು ಎಂದರು.

ರಾಜ್ಯದ ಪ್ರತಿ ವಿದ್ಯಾರ್ಥಿನಿಗೆ ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣ ನೀಡಲಾಗುವುದು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಬಿಪಿಎಲ್ ಹೊಂದಿರುವವರಿಗೆ ಜೀವವಿಮೆಯನ್ನು ನೀಡಲಾಗುತ್ತಿದೆ. ರಾಜ್ಯ ಸರಕಾರಿ ನೌಕರರಿಗೆ ಶೇ.30ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 7 ಸಾವಿರಕ್ಕೂ ಅಧಿಕ ಕೃಷಿಹೊಂಡಗಳನ್ನು ನಿರ್ಮಿಸಲಾಗಿದೆ. ಈ ಮೂಲಕ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷದ ಕೃಷಿ ಹೊಂಡಗಳ ನಿರ್ಮಾಣಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 630 ಕೋಟಿ ರೂ.ಅನುದಾನವನ್ನು ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ರೀತಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿನಯ್‌ ಕುಲಕರ್ಣಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು, ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News