ಅನಂತ್‌ಕುಮಾರ್ ಹೆಗಡೆ ವಿರುದ್ಧ ಕೇಂದ್ರ ಸಚಿವ ಜಾವಡೇಕರ್ ಅಸಮಾಧಾನ
ಬೆಂಗಳೂರು, ಫೆ.18: ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯವರನ್ನು ಹೊರತುಪಡಿಸಿ ಬೇರೆಯವರಿಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಅನಂತ್‌ಕುಮಾರ್ ಹೆಗಡೆ ನೀಡಿರುವ ಹೇಳಿಕೆಯಿಂದ ಪಕ್ಷಕ್ಕೆ ಆಗಿರುವ ಮುಜುಗರ ಬಗ್ಗೆ ರಾಜ್ಯ ಬಿಜೆಪಿ ಘಟಕವು ಜಾವಡೇಕರ್ ಗಮನಕ್ಕೆ ತಂದಿತ್ತು. ಈ ಸಂಬಂಧ ಹೆಗಡೆಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಜಾವಡೇಕರ್ ಕೂಡಲೆ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡಬೇಡಿ. ನಿಮ್ಮ ಹೇಳಿಕೆಗಳಿಗೆ ಸಮರ್ಥನೆ ಕೊಡುವುದು ಕಷ್ಟವಾಗುತ್ತದೆ. ನಾನು 30 ವರ್ಷ ಪಕ್ಷದ ವಕ್ತಾರನಾಗಿ ಕೆಲಸ ಮಾಡಿದ್ದೇನೆ. ಆದರೆ, ಈ ರೀತಿ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ಎಂದಿಗೂ ಕೊಟ್ಟಿಲ್ಲ ಎಂದು ಅನಂತ್‌ಕುಮಾರ್ ಹೆಗಡೆಗೆ ಜಾವಡೇಕರ್ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.