126 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್
ಬೆಂಗಳೂರು, ಫೆ. 18: ಮುಂಬರುವ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಜೆಡಿಎಸ್, ತನ್ನ 126 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ಗೆ ಸೆಡ್ಡು ಹೊಡೆದು ಚುನಾವಣೆಗೆ ತಯಾರಾಗಿರುವ ಬಗ್ಗೆ ಸಂದೇಶ ರವಾನಿಸಿದೆ.
ನಗರದ ಯಲಹಂಕದ ನಿಟ್ಟೆ ಮೀನಾಕ್ಷಿ ಮೈದಾನದಲ್ಲಿ ಶನಿವಾರ ನಡೆದ ‘ವಿಕಾಸ ಪರ್ವ’ ಸಮಾವೇಶದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗಿತ್ತು. ಜೆಡಿಎಸ್‌ನ ಈ ನಡೆಯಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು, ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಪಟ್ಟಿ ಬಿಡುಗಡೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣೆ ಸಮೀಪದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೆ ಅಸಮಾಧಾನ, ಭಿನ್ನಮತ ಭುಗಿಲೆದ್ದು, ಪಕ್ಷಾಂತರ ಮಾಡುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಮೂಲ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತೊಡಕಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹೀಗಾಗಿ, ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡೆ ರಾಜಕೀಯ ಪಕ್ಷಗಳು ಚುನಾವಣೆ ಹತ್ತಿರ ಇರುವಾಗ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದು ಸರ್ವೇ ಸಾಮಾನ್ಯ. ಹೀಗಾಗಿ, ಚುನಾವಣೆ ಸಮೀಪದ ತಿಂಗಳು, ಇಲ್ಲ ಅದಕ್ಕೂ ಮುಂಚೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತಿತ್ತು. ಹಳೇ ನಿಯಮಗಳಿಗೆ ತೆರೆ ಎಳೆದಿರುವ ಜೆಡಿಎಸ್ ಚುನಾವಣೆಗೆ ಮೂರು ತಿಂಗಳು ಇರುವಾಗಲೇ ಅಭ್ಯರ್ಥಿ ಪಟ್ಟಿ ಪ್ರಕಟಿಸಿ, ಗೆಲುವಿಗೆ ರಣತಂತ್ರ ರೂಪಿಸಲು ಮುಂದಾಗಿದೆ.
ಚುನಾವಣೆಗೆ ಮೂರು ತಿಂಗಳ ಮುಂಚೆ ಪಟ್ಟಿ ಬಿಡುಗಡೆ ಮಾಡಿರುವುದರಿಂದ ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸಾಕಷ್ಟು ಸಮಯ ಸಿಗುವುದರಿಂದ ಮತದಾರರು ಹಾಗೂ ಮುಖಂಡರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲುವಿನ ಮಾಲೆ ಧರಿಸಬಹುದೆಂಬುದು ಜೆಡಿಎಸ್ ಲೆಕ್ಕಾಚಾರವಾಗಿದೆ.
ಅನಾನುಕೂಲಗಳೇನು?: ಚುನಾವಣೆಗೆ ಸಾಕಷ್ಟು ಕಾಲಾವಾಕಾಶವಿರುವ ಸಂದರ್ಭದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವುದರಿಂದ ಚುನಾವಣಾ ಟಿಕೆಟ್ ಆಕಾಂಕ್ಷಿಗಳಾಗಿದ್ದ ಅಭ್ಯರ್ಥಿಗಳು ಭಿನ್ನಮತದಿಂದ ಬೇರೆ ಪಕ್ಷಗಳ ಕಡೆ ವಾಲುವ ಸಾಧ್ಯತೆಗಳಿವೆ. ಹೀಗಾಗಿ, ಇದು ಸ್ಥಳೀಯವಾಗಿ ಪಕ್ಷದ ಚುನಾವಣಾ ತಯಾರಿ ಮೇಲೆ ಸ್ವಲ್ಪಪರಿಣಾಮ ಬೀರ ಬಹುದೆಂದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಒತ್ತಡ ಹೆಚ್ಚಿದ್ದು, ಸುರಕ್ಷಿತ ಎನಿಸಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಮುಖಂಡರು ಒತ್ತಡ ಹಾಕಿದ್ದಾರೆ. ಆದರೆ, ರಾಷ್ಟೀಯ ಪಕ್ಷಗಳಲ್ಲಿ ಹೈಕಮಾಂಡ್ ಒಪ್ಪಿಗೆ ಸಿಗುವುದು ಸುಲಭದ ಮಾತಲ್ಲ. ಹೀಗಾಗಿ ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.