ನಲಪಾಡ್ ಬಂಧನಕ್ಕೆ ಮುಗಿದ ಡೆಡ್‌ಲೈನ್: ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
ಬೆಂಗಳೂರು,ಫೆ.18: ಶಾಸಕ ಎನ್.ಎ.ಹಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ನನ್ನು ಹಲ್ಲೆ ಪ್ರಕರಣದಲ್ಲಿ ಬಂಧಿಸದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಅವರನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಆಯುಕ್ತ ಸುನೀಲ್‌ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರವಿವಾರ ಸಂಜೆಯೊಳಗೆ ಆರೋಪಿ ಮೊಹಮ್ಮದ್ ನಲಪಾಡ್ ನನ್ನು ಬಂಧಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮತ್ತು ಎಸಿಪಿಗೆ ಸೂಚನೆ ನೀಡಿದ್ದರು. ಗೃಹ ಸಚಿವರು ಸೂಚನೆ ಕೊಟ್ಟ ಮೇಲೂ ಬಂಧನವಾಗದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಪೊಲೀಸ್ ಆಯುಕ್ತ ಸುನೀಲ್‌ಕುಮಾರ್, ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ಅವರನ್ನೂ ಎತ್ತಂಗಡಿ ಮಾಡಿದ್ದು, ಸೋಮವಾರದಿಂದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಈಗ ತೆರವಾಗಿರುವ ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಹುದ್ದೆಗಳಿಗೆ ಹೊಸ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಿಸಿಬಿಗೆ ವರ್ಗ:? ಶಾಸಕ ಎನ್.ಎ.ಹಾರೀಸ್ ಪುತ್ರ ಮೊಹಮ್ಮದ್ ನಲಪಾಡ್, ಉದ್ಯಮಿಯೊಬ್ಬರ ಪುತ್ರನ ಮೇಲೆ ನಡೆಸಿದ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.