ಮಂಡ್ಯ: ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪಿಸಿ ದೈಹಿಕ ಶಿಕ್ಷಕನ ವಿರುದ್ಧ ಪೋಷಕರ ಪ್ರತಿಭಟನೆ

Update: 2018-02-18 17:42 GMT

ಮಂಡ್ಯ, ಫೆ.18: ದೈಹಿಕ ಶಿಕ್ಷಣ ಶಿಕ್ಷಕ ವಿದ್ಯಾರ್ಥಿಗಳನ್ನು ಬೇರೆಯವರ ಬಳಿ ಮನೆಪಾಠಕ್ಕೆ ಹೋಗಬಾರದೆಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಪ್ರತಿಭಟನೆ ನಡೆಯಿತು.

ಮನೆಪಾಠದ ವಿಷಯದಲ್ಲಿ ಮಕ್ಕಳಿಗೆ ಕಿರುಕುಳ ನೀಡುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜು ಈ ಶಾಲೆಗೆ ಬೇಕಾಗಿಲ್ಲ. ಕೂಡಲೇ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕ ಬಸವರಾಜು, ನಾನು ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಮೇಲೆ ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಾನು ತಪ್ಪಿತಸ್ಥನೆಂದು ಸಾಬೀತಾದರೆ ಶಾಲೆಯ ಆಡಳಿತ ಮಂಡಳಿಯ ನಿರ್ಧಾರಕ್ಕೆ ಬದ್ದನಾಗಿರುತ್ತೇನೆಂದು ಸ್ವಷ್ಟಪಡಿಸಿದರು.

ಶಾಲೆಯ ಗೌರವ ಕಾರ್ಯದರ್ಶಿ ಜಗದೀಶಪ್ಪ ಮಾತನಾಡಿ, ಅಧ್ಯಕ್ಷ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಕಾರ್ಯನಿಮಿತ್ತ ಹೊರ ಹೋಗಿರುವುದರಿಂದ ಫೆ.21ರಂದು ಪೋಷಕರ ಸಭೆ ಕರೆಯಲಾಗಿದೆ.  ಅಂದಿನ ಸಭೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವಿನ ಸಮಸ್ಯೆ ಬಗ್ಗೆ ಚರ್ಚಿಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News