ಮುಹಮ್ಮದ್ ನಲಪಾಡ್‌ ಹಲ್ಲೆ ಪ್ರಕರಣ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Update: 2018-02-19 13:35 GMT

ಬೆಂಗಳೂರು, ಫೆ.19: ಕಾಂಗ್ರೆಸ್ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್‌ಗೆ ಜಾಮೀನು ಸಿಗುವಂತೆ ಮಾಡಲು ಪೊಲೀಸರು ಉದ್ದೇಶಪೂರ್ವಕವಾಗಿಯೆ ಆತನನ್ನ ಬಂಧಿಸದೆ ವಿಳಂಬ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬಿಜೆಪಿ ಹಾಗೂ ಜೆಡಿಎಸ್‌ನ ನೂರಾರು ಕಾರ್ಯಕರ್ತರು ಕಬ್ಬನ್‌ಪಾರ್ಕ್ ಠಾಣೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.

ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದರಿಂದ ರಸ್ತೆ ತಡೆ, ಪ್ರತಿಭಟನೆಯನ್ನು ಕೈ ಬಿಡುವಂತೆ ಪೊಲೀಸರು ಎಷ್ಟು ಮನವಿ ಮಾಡಿದರೂ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಇದರಿಂದ ಅನಿವಾರ್ಯವಾಗಿ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನು ಮಾಡಬೇಕಾಯಿತು.

ಇದಕ್ಕೂ ಮುನ್ನ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಸೇರಿ ಸರಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೆ, ಶಾಸಕ ಹಾರಿಸ್ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆಗೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News