ಕೌಶಲ್ಯ ಅಭಿವೃದ್ಧಿ ವಿವಿ ಸ್ಥಾಪನೆಗೆ ಪರಿಶೀಲನೆ: ಬಸವರಾಜ ರಾಯರಡ್ಡಿ

Update: 2018-02-21 12:35 GMT

ಬೆಂಗಳೂರು, ಫೆ.21: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆಯೂ ಸರಕಾರ ಪರಿಶೀಲನೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.

ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ವಿಧೇಯಕದ ಮೇಲಿನ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ, ಕೊಪ್ಪಳ ಹಾಗೂ ಮೈಸೂರಿನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಶೀಘ್ರವೇ ಅವುಗಳಿಗೆ ಚಾಲನೆ ನೀಡಲಾಗುವುದು. ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಶೇ.28ರಷ್ಟಿರುವ ಪದವೀಧರರ ಪ್ರಮಾಣವನ್ನು ಶೇ.40ಕ್ಕೆ ಹೆಚ್ಚಿಸಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯೂ ಅದರ ಒಂದು ಭಾಗವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಜವಾಬ್ದಾರಿಯು ನಮ್ಮ ಮೇಲಿದೆ ಎಂದು ಬಸವರಾಜರಾಯರಡ್ಡಿ ತಿಳಿಸಿದರು.

ಇದಲ್ಲದೆ, ಖಾಸಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಣಕ್ಕೆ ತರುವ ಸಂಬಂಧ ಪ್ರೊ.ಕುಟಿನೊ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿ ತನ್ನ ವರದಿಯಲ್ಲಿ ನೀಡುವ ಶಿಫಾರಸ್ಸುಗಳನ್ನು ಆಧರಿಸಿ ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News