ಸಮಾಜ ವಿರೋಧಿ ಚಟುವಟಿಕೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ : ಡಾ.ಜಿ.ಪರಮೇಶ್ವರ್
ಬೆಂಗಳೂರು, ಫೆ.22: ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಉನ್ನತ ಸ್ಥಾನದಲ್ಲಿರುವ ಯಾರೇ ಆಗಲಿ, ಸಮಾಜಬಾಹಿರ ಚಟುವಟಿಕೆಯಲ್ಲಿ ತೊಡಗುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದರು.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗುವವರು ಕಾಂಗ್ರೆಸ್‌ನಲ್ಲಿ ಉನ್ನತ ಸ್ಥಾನದಲ್ಲಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲವೆಂದು ತಿಳಿಸಿದರು.
ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್‌ರನ್ನು 6 ವರ್ಷಗಳ ಕಾಲ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ. ಹಾಗೂ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಳಂಬ ಮಾಡಿದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಆದರೂ ಬಿಜೆಪಿ ನಲಪಾಡ್ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕೆ.ಆರ್.ಪುರದ ಬಿಬಿಎಂಪಿ ಕಚೇರಿಯಲ್ಲಿ ದಾಂಧಲೆ ನಡೆಸಿದ ಮಾಜಿ ಬ್ಲಾಕ್ ಅಧ್ಯಕ್ಷ ನಾರಾಯಣಸ್ವಾಮಿ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಆದರೆ, ಬಿಜೆಪಿ ನಾಯಕರು ಈ ಪ್ರಕರಣಗಳನ್ನು ಮುಂದಿಟ್ಟುಕೊಂಡು ರಾಜಕೀಯವಾಗಿ ಮಾತನಾಡುವುದು ಸರಿಯಲ್ಲವೆಂದು ಅವರು ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯುರಪ್ಪ ‘ಬಚ್ಚಾ’ ಅನ್ನುವ ಮೂಲಕ ಅವಮಾನ ಮಾಡಿದ್ದಾರೆ. ಯಡಿಯೂರಪ್ಪ ತಾವು ಆಡುವ ಮಾತಿನ ಮೇಲೆ ಹಿಡಿತವಿರಬೇಕು. ಸುದೀರ್ಘವಾದ ರಾಜಕೀಯ ಅನುಭವ ಹೊಂದಿದ್ದರೂ ಒಂದು ಪಕ್ಷದ ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಬಗ್ಗೆ ಹೇಗೆ ಮಾತನಾಡಬೇಕೆಂಬ ಕನಿಷ್ಠ ಪ್ರಜ್ಞೆಯಿಲ್ಲದಿದ್ದರೆ, ಯಡಿಯೂರಪ್ಪರವರ ಅವರ ರಾಜಕೀಯ ಜೀವನಕ್ಕೆ ಅರ್ಥವೇ ಇಲ್ಲ.
-ಡಾ.ಜಿ.ಪರಮೇಶ್ವರ್ ಅಧ್ಯಕ್ಷ ಕೆಪಿಸಿಸಿ