ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಮನಹರ್ ವಲ್ಜೀಬಾಯಿ ಜಾಲ

Update: 2018-02-24 15:14 GMT

ಬೆಂಗಳೂರು, ಫೆ. 24: ಪೌರಕಾರ್ಮಿಕರ ಸುರಕ್ಷತೆ ಹಾಗೂ ಕರ್ತವ್ಯ ನಿರ್ವಹಣೆ ಕುರಿತಂತೆ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕಾಗಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಮನಹರ್‌ವಲ್ಜೀಬಾಯಿ ಜಾಲ ಸಲಹೆ ಮಾಡಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಸಮಸ್ಯೆ ಕುರಿತು ನಡೆದ ಪರಿಶೀಲನಾ ಸಭೆ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮ್ಯಾನ್ಯುಯಲ್ ಸ್ಕಾವೆಂಜರ್ ಅಧಿನಿಯಮದ ಪ್ರಕಾರ ಅಗತ್ಯ ಮುನ್ನಚ್ಚರಿಕೆ ಕ್ರಮಕೈಗೊಂಡಲ್ಲಿ ಕರ್ತವ್ಯ ನಿರತ ಪೌರ ಕಾರ್ಮಿಕರ ದುರಂತಗಳನ್ನು ತಪ್ಪಿಸಲು ಸಾಧ್ಯ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದನ್ವಯ ಪೌರಕಾರ್ಮಿಕರ ವೃತ್ತಿಯಲ್ಲಿನ ಗುತ್ತಿಗೆ ಪದ್ದತಿಯನ್ನು ಅನುಸರಿಸುವಂತಿಲ್ಲ. ಈ ಸಂಬಂಧ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದ ಅವರು, ಪೌರ ಕಾರ್ಮಿಕರ ಸಾವಿನ ದುರಂತಗಳನ್ನು ತಪ್ಪಿಸಲು ಎಂ.ಎಸ್.ಕಾಯ್ದೆ 2013ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

ಕರ್ತವ್ಯದ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿಗಳ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರ ಹಾಗೂ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ಹೆಚ್ಚಿನ ಒತ್ತು ನೀಡಬೇಕೆಂದು ಸೂಚಿಸಿದರು.

ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿನ ಸಫಾಯಿ ಕರ್ಮಚಾರಿಗಳಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ವೇತನಕ್ಕಿಂತ ಹೆಚ್ಚು ವೇತನ ನೀಡಲಾಗುತ್ತಿದೆ. ಅಲ್ಲದೆ, ಅವರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಲಾಗಿದೆ ಎಂದರು.

2010ರಿಂದ ಈವರೆಗೂ ರಾಜ್ಯದಲ್ಲಿ 68 ಮಂದಿ ಸಫಾಯಿ ಕರ್ಮಚಾರಿಗಳು ಮೃತಪಟ್ಟಿದ್ದು, 2017-18ರಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಎಲ್ಲ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಸ್ಪಷ್ಟಣೆ ನೀಡಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ನರೈನ್‌ದಾಸ್, ಆಯೋಗದ ಸದಸ್ಯ ಜಗದೀಶ್ ಹೀರೇಮನಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಸಲಹೆಗಾರ ಇ.ವೆಂಕಟಯ್ಯ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

‘ಶೌಚಗುಂಡಿ ಸ್ವಚ್ಚತೆ ಪೌರ ಕಾರ್ಮಿಕ ಬಳಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ದುರಂತ ಸಂಭವಿಸಿದಾಗ ಸಂಬಂಧಪಟ್ಟವರ ವಿರುದ್ಧ ಎಂ.ಎಸ್ ಕಾಯ್ದೆಯ ಕಲಂ 402/2ರ ಅನ್ವಯ ಜಾಮೀನು ರಹಿತ ಕೇಸ್ ದಾಖಲಿಬೇಕು’
-ಮನಹರ್‌ವಲ್ಜೀಬಾಯಿ ಜಾಲ, ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News