ಮಾ.11 ರಿಂದ ಮಾದಿಗ ಜನ ಜಾಗೃತಿ ಅಭಿಯಾನ

Update: 2018-03-01 12:12 GMT

ಬೆಂಗಳೂರು, ಮಾ.1: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಸರಕಾರದ ವಿರುದ್ಧ ಹಾಗೂ ಮುಂದಿನ ಚುನಾವಣೆಯಲ್ಲಿ ದಲಿತ ನಾಯಕರನ್ನು ಆಯ್ಕೆ ಮಾಡುವಂತೆ ಜಾಗೃತಿ ಮೂಡಿಸಲು ಮಾ.11 ರಿಂದ ರಾಜ್ಯಾದ್ಯಂತ ಮಾದಿಗ ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಕರ್ನಾಟಕ ಮಾದಿಗರ ಸಂಘಟನೆಗಳ ಸ್ವಾಭಿಮಾನದ ಒಕ್ಕೂಟ ಮುಂದಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಎ.ಕೇಶವಮೂರ್ತಿ, ದಲಿತ ಸಮುದಾಯಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಸಲ್ಲಿಸಿ ವರ್ಷಗಳೇ ಕಳೆಯುತ್ತಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಒಂದು ಸಮುದಾಯವನ್ನು ಓಲೈಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮುಂದಿನ ಎಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ದಲಿತ ಸಮುದಾಯವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಅಭಿಯಾನ ಹಮ್ಮಿಕೊಂಡಿದ್ದು, ಮಾ.11 ರಂದು ತುಮಕೂರಿನಿಂದ ಆರಂಭವಾಗಿ ರಾಜ್ಯದ ಎಲ್ಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಜನರಿಗೆ ಜಾಗೃತಿ ಮೂಡಿಸಲಾಗುತ್ತದೆ. ಅಲ್ಲದೆ, ಈ ಸಂದರ್ಭದಲ್ಲಿ ನಮ್ಮ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡುವ ಯಾವುದೇ ಜಾತಿಯ ಹಾಗೂ ಪಕ್ಷದವರಿಗೆ ನಮ್ಮ ಬೆಂಬಲ ನೀಡುತ್ತೇವೆ. ಭರವಸೆ ನೀಡದಿದ್ದ ಪಕ್ಷದಲ್ಲಿ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಅವರು ಹೇಳಿದರು.

ನ್ಯಾ.ಸದಾಶಿವ ಆಯೋಗದ ವರದಿಯಲ್ಲಿನ ಮೂಲ ಅಂಶಗಳನ್ನು ಯಥಾವತ್ತಾಗಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು. ಸಾಮಾಜಿಕ, ಆರ್ಥಿಕ ಜಾತಿಗಣತಿ ವರದಿಯನ್ನು ಕೂಡಲೇ ಸರಕಾರ ಬಿಡುಗಡೆ ಮಾಡಬೇಕು. ಎಲ್ಲ ರಾಜಕೀಯ ಪಕ್ಷಗಳು ಮಾದಿಗ ಸಮುದಾಯಕ್ಕೆ ಕನಿಷ್ಠ 15 ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News