ಟ್ರಾಫಿಕ್ ಸಮಸ್ಯೆ ಬಗೆಹರಿಸಲು ವಿಶೇಷ ತಜ್ಞರ ಸಮಿತಿ ರಚನೆ ಅವಶ್ಯ: ಹೈಕೋರ್ಟ್

Update: 2018-03-02 16:46 GMT

ಬೆಂಗಳೂರು, ಮಾ.2: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ನೀರು, ರಸ್ತೆ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ತಜ್ಞರ ಸಮಿತಿಯೊಂದನ್ನು ರಚಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯಪಟ್ಟಿದೆ.

ನಮ್ಮ ಬೆಂಗಳೂರು ಫೌಂಡೇಷನ್ ಮತ್ತು ಸಿಟಿಜನ್ ಆ್ಯಕ್ಷನ್ ಫೋರಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಹರೀಶ್ ಅವರು, ಬೆಂಗಳೂರಿನಲ್ಲಿ 5 ಸಾವಿರ ಬಿಎಂಟಿಸಿ ಬಸ್‌ಗಳು ಸೇರಿ ಒಟ್ಟು 60 ರಿಂದ 80 ಲಕ್ಷ ವಾಹನಗಳಿವೆ. ಇದರಿಂದಾಗಿ, ಟ್ರಾಫಿಕ್ ಜಾಮ್ ಹೆಚ್ಚಾಗಿದೆ. 2011ರ ವರದಿಯ ಪ್ರಕಾರ ಪ್ರತಿ ವರ್ಷ 35.5 ಲಕ್ಷ ನಾಲ್ಕು ಚಕ್ರ ವಾಹನಗಳು ಹಾಗೂ 50 ಲಕ್ಷ ದ್ವಿಚಕ್ರ ವಾಹನಗಳು ಹೊಸದಾಗಿ ನೋಂದಣಿಯಾಗುತ್ತವೆ ಎಂದು ವಿವರಣೆ ನೀಡಿದರು.

ಮುಂಬೈನಲ್ಲಿ ಬಹಳವಾಗಿ ಟ್ರಾಫಿಕ್ ಸಮಸ್ಯೆಯಿದ್ದರೂ ಆ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮವನ್ನು ಕೈಗೊಂಡಿದ್ದಾರೆ. ಆದರೆ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ನೀರು, ರಸ್ತೆ ಹಾಗೂ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ವಿಶೇಷ ತಜ್ಞರ ಸಮಿತಿಯೊಂದನ್ನು ರಚಿಸುವ ಅವಶ್ಯಕತೆ ಇದೆ ಎಂದು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮೌಖಿಕವಾಗಿ ಅಭಿಪ್ರಾಯಪಟ್ಟಿತು. ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು ಹಾಜರಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮಾ.9ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News