ಬೆಂಗಳೂರು: ಮಾ.8ಕ್ಕೆ ಪರಿಶಿಷ್ಟ ನೌಕರರ ಜಾಗೃತಿ ಸಮಾವೇಶ
ಬೆಂಗಳೂರು, ಮಾ. 4: ರಾಜ್ಯ ಸರಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಮೂರನೆ ಸಮಾವೇಶವನ್ನು ಮಾ.8ರಂದು ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸಲಿದ್ದಾರೆ.
ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಸಹಕಾರ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಕವಿ ಡಾ.ಸಿದ್ದಲಿಂಗಯ್ಯ ವಹಿಸಲಿದ್ದಾರೆ.
ಸಮಾವೇಶದಲ್ಲಿ ‘ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಅನಿಷ್ಟಾನ’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಹೈಕೋರ್ಟ್ ವಕೀಲ ಎಂ.ಮಂಜುನಾಥ ವಿಷಯ ಮಂಡನೆ ಮಾಡಲಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ನಾಗಾಂಬಿಕಾ ದೇವಿ, ಮಾರುತಿ ಮಾನ್ಪಡೆ ಪಾಲ್ಗೊಳ್ಳಲಿದ್ದಾರೆ.
ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಹೆಚ್ಚುವರಿ ಪೊಲೀಸ್ ಆಯುಕ್ತ ನಂಜುಂಡಸ್ವಾಮಿ, ಕೆಂಪರಾಮಯ್ಯ, ಪ್ರೊ.ಬಿ.ಕೆ.ರವಿ, ಸಮಿತಿ ಅಧ್ಯಕ್ಷ ಶಿವಶಂಕರ್, ಪದಾಧಿಕಾರಿಗಳಾದ ಸೋಮಶೇಖರ್, ಡಾ.ಎಸ್.ವಿಜಯಕುಮಾರ್, ಸತ್ಯ ನಾರಾಯಣ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.