×
Ad

ಉಡುಪಿ ಕ್ಷೇತ್ರದಲ್ಲಿ 850 ಕ್ರೀಡಾ ಕಿಟ್‌ ವಿತರಣೆ: ಸಚಿವ ಪ್ರಮೋದ್

Update: 2018-03-06 19:19 IST

ಉಡುಪಿ, ಮಾ. 6: ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವ ಸಂಘಗಳಿಗೆ ರಾಜ್ಯ ಸರಕಾರದ ಯುವ ಚೈತನ್ಯ ಕಾರ್ಯಕ್ರಮದಡಿಯಲ್ಲಿ 40 ಸಾವಿರ ರೂ. ಮೌಲ್ಯದಲ್ಲಿ ಕ್ರೀಡಾ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 850 ಕಿಟ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾದ ಮಂಗಳೂರು ವಿವಿ ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ. ಯುವಜನತೆ ಕೇವಲ ಅಂಕ ಗಳಿಸುವ ಯಂತ್ರವಾಗದೆ ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೀವನದಲ್ಲಿ ಯಶಸ್ವಿ ಆಗಬೇಕು. ಕ್ರೀಡೆಯಿಂದ ಆತ್ಮವಿಶ್ವಾಸ, ಮನೋಸ್ಥೈರ್ಯ ವೃದ್ಧಿ ಯಾಗುತ್ತದೆ ಎಂದರು.

ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀವರ್ಚನ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯ ದರ್ಶಿ ಪ್ರದೀಪ್ ಕುಮಾರ್ ಮಾತನಾಡಿದರು.

ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ ಜೆ., ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಜೋಗಿ, ಆಡಳಿತ ಮಂಡಳಿ ಸದಸ್ಯ ಎಂ.ಆರ್.ಹೆಗ್ಡೆ, ಮಂಗಳೂರು ವಿವಿ ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ರಮೇಶ್ ಎಚ್. ಎನ್., ವಕೀಲ ಬೈಕಾಡಿ ಸುಪ್ರಸಾದ್ ಶೆಟ್ಟಿ, ದೈಹಿಕ ಸಂಘ ನಿರ್ದೇಶಕ ಸಂಘದ ಅಧ್ಯಕ್ಷ ವೇಣುಗೋಪಾಲ್ ಉಪಸ್ಥಿತರಿದ್ದರು.

ಕನ್ನಡ ಪ್ರಾಧ್ಯಾಪಕ ರಮಾನಂದ ರಾವ್ ವಂದಿಸಿದರು. ಸತೀಶ್ ಶೆಟ್ಟಿ ಚಿರಪಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News