×
Ad

​ನ್ಯಾ.ವಿಶ್ವನಾಥ್ ಮೇಲಿನ ಹಲ್ಲೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Update: 2018-03-09 19:02 IST

ಬೆಂಗಳೂರು, ಮಾ.9: ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ಜೆಡಿಎಸ್ ಬೆಂಗಳೂರು ಘಟಕದ ವತಿಯಿಂದ ನಗರದ ಪುರಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಲೋಕಾಯುಕ್ತ ನ್ಯಾಯಮೂರ್ತಿಗೆ ರಕ್ಷಣೆ ಇಲ್ಲವೆಂದರೆ ಸಾಮಾನ್ಯ ಜನತೆಯ ಗತಿಯೇನು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ರಾಜ್ಯದ ಜನತೆಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಪ್ರತಿದಿನ ರಾಜ್ಯದಲ್ಲಿ ಹಲ್ಲೆ ಪ್ರಕರಣಗಳು ವರದಿಯಾಗುತ್ತಲೆ ಇವೆ. ಜನ ಸಾಮಾನ್ಯರ ಸಾವು-ನೋವುಗಳಿಗೆ ಯಾರು ಧಿಕ್ಕೆ ಇಲ್ಲದಂತಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸ್ ಹಾಗೂ ನ್ಯಾಯವಾದಿಗಳ ಮೇಲೆಯೆ ಹಲ್ಲೆಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ, ರಾಜ್ಯ ಸರಕಾರ ಮಾತ್ರ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವುದರತ್ತ ಗಮನ ಕೊಡುತ್ತಿಲ್ಲ. ಬದಲಿಗೆ, ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಇಳಿಯುತ್ತಾ, ಕಾಲಹರಣ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂತಹ ಆಡಳಿತ ನಿರೀಕ್ಷಿಸಿರಲಿಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.

ನಾನು ರಾಜ್ಯದಲ್ಲಿ ಗೃಹ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಅಪರಾಧ ಚಟುವಟಿಕೆಗಳನ್ನು ಮೊಳಕೆಯಲ್ಲಿಯೆ ಕೀಳದಿದ್ದರೆ ದೊಡ್ಡ ಹೆಮ್ಮರವಾಗಿ ಬೆಳೆದು, ರಾಜ್ಯಕ್ಕೆ ದೊಡ್ಡ ಸಮಸ್ಯೆಯನ್ನು ತಂದೊಡ್ಡಲಿವೆ. ಹೀಗಾಗಿ ರಾಜ್ಯ ಸರಕಾರ ಅತ್ಯಂತ ನಿಗಾ ವಹಿಸಿ, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳ ಮೂಲವನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News