224 ಕ್ಷೇತ್ರಗಳ ಪದಾಧಿಕಾರಿಗಳೊಂದಿಗೆ ಚರ್ಚೆ: ಡಾ.ಜಿ.ಪರಮೇಶ್ವರ್

Update: 2018-03-09 15:13 GMT

ಬೆಂಗಳೂರು, ಮಾ.9: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಕುರಿತು 224 ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇವತ್ತಿನ ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರತಿಯೊಂದು ಕ್ಷೇತ್ರದ ಮಾಹಿತಿಯನ್ನು ಪದಾಧಿಕಾರಿಗಳಿಂದ ಕಲೆ ಹಾಕಿದ್ದೇವೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಯಾವ ರೀತಿ ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು ರಕ್ಷಿಸಿ ಯಾತ್ರೆ ಮೂಲಕ ಬಿಜೆಪಿಯವರು ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅವರ ಸುಳ್ಳು ಆರೋಪಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಅನ್ನುವುದರ ಬಗ್ಗೆ ಚರ್ಚೆ ವಾಡಿದ್ದೇವೆ ಎಂದು ಅವರು ತಿಳಿಸಿದರು.

ಬೆಂಗಳೂರಿನ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಮಹಾನಗರಕ್ಕೆ ಕಾಂಗ್ರೆಸ್ ಸರಕಾರ ಕೊಟ್ಟಿರುವ ಕೊಡುಗೆಗಳು, ಕಾರ್ಯಕ್ರಮಗಳು, ಯೋಜನೆಗಳನ್ನು ಮತದಾರರಿಗೆ ಪರಿಚಯಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಎಪ್ರಿಲ್ ಮೊದಲ ವಾರದಿಂದ 23ವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ‘ಮನೆ ಮನೆಗೆ ಪಾದಯಾತ್ರೆ’ ನಡೆಸುತ್ತೇವೆ. ರಾಜ್ಯದಲ್ಲಿ ಬಿಜೆಪಿಯನ್ನು ಯಾವುದೆ ಕಾರಣಕ್ಕೂ ಅಧಿಕಾರಕ್ಕೆ ಬರಲು ಬಿಡಬಾರದು. ಕಾಂಗ್ರೆಸ್ ಪಕ್ಷವನ್ನು ಮತ್ತೆ ಹೇಗೆ ಅಧಿಕಾರಕ್ಕೆ ತರಬೇಕು ಅನ್ನೋದರ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಚರ್ಚೆ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ನೈಸ್ ಸಂಸ್ಥೆಯ ಮುಖ್ಯಸ್ಥ, ಕನ್ನಡ ಮಕ್ಕಳ ಪಕ್ಷದ ಅಧ್ಯಕ್ಷ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಬೆನ್ನಲ್ಲೆ ಬೀದರ್ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಕೇಳಿ ಬಂದಿರುವುದನ್ನು ಒಪ್ಪಿಕೊಂಡ ಪರಮೇಶ್ವರ್, ಕೆಲವರು ಅಶೋಕ್ ಖೇಣಿ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ ಎಂದರು.

ಬೀದರ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಅಶೋಕ್ ಖೇಣಿ ಸೇರ್ಪಡೆಯಿಂದ ಉಂಟಾಗಿರುವ ಗೊಂದಲಗಳು, ಸಮಸ್ಯೆಗಳು ಶೀಘ್ರವೆ ಬಗೆಹರಿಯಲಿವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಆಕಾಂಕ್ಷಿಯಾಗಿರುವ ಪದಾಧಿಕಾರಿಗಳು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿ ಕ್ಷೇತ್ರಗಳಲ್ಲಿ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಕಾರಣ ನೀಡದೆ ಗೈರು ಹಾಜರಾದ ಪದಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News