ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ ನೇಮಕಾತಿಗೆ ಕ್ರಮ: ಸಚಿವ ಈಶ್ವರ ಖಂಡ್ರೆ
ಉಡುಪಿ, ಮಾ.9: ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ 3,000 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲವಾಗಲಿದೆ ಎಂದು ರಾಜ್ಯ ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ರಾಜ್ಯದಾದ್ಯಂತ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಈಗಾಗಲೇ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಅಲ್ಲದೇ ಇಲಾಖೆಯಲ್ಲಿ ವಿವಿಧ ವರ್ಗದ 3000 ಹುದ್ದೆಗಳ ನೇಮಕಾತಿ ಮಾಡುವ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಖಂಡ್ರೆ ವಿವರಿಸಿದರು.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಎಲ್‌ಎಡಿ ಸೋಲಾರ್ ದೀಪ ಅಳವಡಿಸುವ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್‌ಎಡಿ ಬಲ್ಬ್‌ಗಳ ಬಳಕೆಯಿಂದ ಸುಮಾರು ಶೇ.70ರಷ್ಟು ವಿದ್ಯುತ್ ಉಳಿತಾಯ ಸಾದ್ಯವಾಗಲಿದೆ ಎಂದರು.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಎಲ್‌ಎಡಿ ಸೋಲಾರ್ ದೀಪ ಅಳವಡಿಸುವ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್‌ಎಡಿ ಬಲ್ಬ್‌ಗಳ ಬಳಕೆಯಿಂದ ಸುಮಾರು ಶೇ.70ರಷ್ಟು ವಿದ್ಯುತ್ ಉಳಿತಾಯ ಸಾದ್ಯವಾಗಲಿದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಅಮೃತ್ ಯೋಜನೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆಯದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಘನತ್ಯಾಜ್ಯ ವಿಲೇವಾರಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚಿಸಿದರು. ನಗರೋತ್ಥಾನ 3ನೇ ಹಂತದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸುವಂತೆ ಸೂಚಿಸಿದ ಖಂಡ್ರೆ, ನಗರೋತ್ಥಾನ, ಎಸ್‌ಎಫ್‌ಸಿ, ವಿಶೇಷ ಎಸ್‌ಎಫ್‌ಸಿ ಸೇರಿದಂತೆ ವಿವಿಧ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸಮಯದ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಅಗತ್ಯ ಸೌಲ್ಯಗಳನ್ನು ಒದಗಿಸುವಂತೆ ಸೂಚಿಸಿದ ಸಚಿವರು, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಸಮಯ ಮಿತಿಯಲ್ಲಿ ನೀಡುವಂತೆ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವಂತೆ ಸೂಚಿಸಿದರು.
ಸಭೆಯಲ್ಲಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.