ಬೆಂಗಳೂರು: ರೈಲ್ವೆ ಇಲಾಖೆ ಹುದ್ದೆಗಳ ಭರ್ತಿಗೆ ಆಗ್ರಹಸಿ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ
ಬೆಂಗಳೂರು, ಮಾ.13: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡುವ ಮೂಲಕ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕೆಂದು ಅಪ್ರೆಂಟಿಸ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಸೋಮವಾರ ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಬೇಕಾದ ಸಿಸಿಎಎ ತರಬೇತಿ ಪಡೆದಿದ್ದೇವೆ. ಈಗಾಗಲೇ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಹೋರಾಟ ಮಾಡುತ್ತಿದ್ದರೂ ಸಹ ಕೇಂದ್ರ ಸರಕಾರ ನಮ್ಮ ಸಮಸ್ಯೆ ಪರಿಹರಿಸಲು ಮುಂದಾಗುತ್ತಿಲ್ಲ. ನಮಗೂ ದಿನಕಳೆದಂತೆ ಉದ್ಯೋಗದ ವಯೋಮಿತಿ ಮೀರುತ್ತದೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು, ಈ ಸಂಬಂಧ ರಾಜ್ಯದ ಕೇಂದ್ರ ಸಚಿವರು ಈ ಕೂಡಲೇ ಒತ್ತಡ ಹೇರಬೇಕೆಂದು ಒತ್ತಾಯಿಸಿದರು.
ಫಿನಾಯಿಲ್ ಕುಡಿದರು: ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಯಾರೊಬ್ಬರು ನಮ್ಮ ಸಮಸ್ಯೆ ಕೇಳಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಫಿನಾಯಿಲ್ ಕುಡಿಯುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಇದಕ್ಕೆ ಲೆಕ್ಕಿಸದ ಪ್ರತಿಭಟನಾಕಾರರು, ಈ ಕೂಡಲೇ ರಾಜ್ಯದಲ್ಲಿರುವ ಕೇಂದ್ರ ಸಚಿವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಮಂತ್ರಿ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ, ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿ, ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವಂತೆ ಕೇಂದ್ರಕ್ಕೆ ಒತ್ತಡ ಹೇರಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಅಪ್ರೆಂಟಿಸ್ ತರಬೇತಿ ಪೂರ್ಣಗೊಳಿಸಿದ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.