ಟೀಕಾಕಾರರ ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಚಿವ ರೈ
ಬಂಟ್ವಾಳ, ಮಾ. 12: "ಟೀಕಾಕಾರರ ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿ ಕಾರ್ಯಗಳೇ ತನ್ನ ದಿಟ್ಟ ಉತ್ತರ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸೋಮವಾರ ಬಿ.ಸಿ.ರೋಡಿನ ಮಿನಿವಿಧಾನಸೌಧದ ಬಳಿ ಇಂದಿರಾ ಕ್ಯಾಂಟೀನ್‌ಗೆ ಶಿಲಾನ್ಯಾಸ ನೆರವೇರಿಸಿ, ಬಂಟ್ವಾಳ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬುಡಾ ಅಧ್ಯಕ್ಷ ಸದಾಶಿವ ಬಂಗೇರ ಪ್ರಸ್ತಾವಿಸಿ, ಬಂಟ್ವಾಳದಲ್ಲಿ ವಾಹನ ನಿಬಿಡತೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ 2009ರಿಂದ ಪುರಸಭಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬುಡಾ ಕಚೇರಿಯನ್ನು ಮಿನಿ ವಿಧಾನಸೌಧ ಮುಂಭಾಗದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸುಮಾರು 26 ರೂ. ವೆಚ್ಚದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗಿದೆ ಎಂದರು.
ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಸರಕಾರದ ಮುಖ್ಯಸಚೇತಕ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುತ್ತೂರು ನಗರಾಭಿವೃದ್ಧಿ ಯೋಜನೆಯ ಅಧ್ಯಕ್ಷ ಪ್ರಶಾಂತ್ ಕೌಶಲ್ ಶೆಟ್ಟಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಶಾಹುಲ್ ಹಮೀದ್, ಮಂಜುಳಾ ಮಾಧವ ಮಾವೆ, ಬುಡಾ ಸದಸ್ಯ ಕಾರ್ಯದರ್ಶಿ ಅಭಿಲಾಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಟ್ಟಡ ಕಾಮಗಾರಿಯ ಗುತ್ತಿಗೆದಾರ ಓಝೋಲ್ಡ್ ಗೋವಿಯಸ್ ಅವರನ್ನು ಸನ್ಮಾನಿಸಲಾಯಿತು. ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರ್ವಹಿಸಿದರು.