ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ರಾಜೀನಾಮೆ

Update: 2018-03-13 12:28 GMT

ಬೆಂಗಳೂರು, ಮಾ.13: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉದ್ದೇಶಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಆದೇಶದ ಪ್ರಕಾರ ಪದಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

'ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾಲ್ಕು ದಶಕಗಳಿಂದ ಪಕ್ಷದ ಸೇವೆಗೆ ನನ್ನನ್ನು ತೊಡಗಿಸಿಕೊಂಡಿದ್ದೇನೆ. ಅನೇಕ ಬಾರಿ ನಾನು ಚುನಾವಣೆಗೆ ಸ್ಪರ್ಧೆ ಬಯಸಿ ವಿಫಲವಾಗಿದ್ದೇನೆ. ಆದರೆ, ನನ್ನ ವಯೋಮಿತಿಯ ಕಾರಣ ಈ ಬಾರಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಪದಾಧಿಕಾರಿಗಳ ಸಮಿತಿಯ ಸಭೆಯಲ್ಲಿ ಅಧ್ಯಕ್ಷರ ಸಮ್ಮುಖದಲ್ಲಿ ಪದಾಧಿಕಾರಿಗಳು ಸ್ಪರ್ಧೆ ಬಯಸಿದರೆ ರಾಜೀನಾಮೆ ನೀಡುವುದು ಸೂಕ್ತ ಎಂದು ಸೂಚಿಸಿರುವ ಕಾರಣ ಅವರ ಹೇಳಿಕೆಯನ್ನು ಗೌರವಿಸಿ ನನ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿದ್ದೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ನನ್ನ ಮನವಿಯನ್ನು ಸ್ವೀಕರಿಸಿ, ರಾಜೀನಾಮೆಯನ್ನು ಅಂಗೀಕರಿಸಿ ನನ್ನ ಕ್ಷೇತ್ರದಲ್ಲಿ ಕಾರ್ಯೋನ್ಮುಖರಾಗಲು ನನಗೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡುತ್ತೇನೆ. ನನ್ನ ಧೀರ್ಘಾವಧಿ ಸೇವೆಯನ್ನು ಗುರುತಿಸಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಅವರು ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News