ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ವತಂತ್ರವಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಬಿಡುತ್ತಿಲ್ಲ: ದೇವೇಗೌಡ

Update: 2018-03-13 12:58 GMT

ಬೆಂಗಳೂರು, ಮಾ.13: ರಾಜ್ಯ ಸರಕಾರದಲ್ಲಿ ಸಮನ್ವಯತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಮಂಗಳವಾರ ನಗರದ ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿಯ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿರುವುದರಿಂದ ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದರು.

ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಹಿಡಿತದಲ್ಲಿ ಇಲ್ಲ. ಯಾರೋ ಬೇರೆ ವ್ಯಕ್ತಿಯ ಹಿಡಿತದಲ್ಲಿ ಅಧಿಕಾರಿಗಳಿದ್ದಾರೆ ಎಂದು ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ಹೆಸರು ಉಲ್ಲೇಖಿಸದೆ ಆಕ್ರೋಶ ವ್ಯಕ್ತಪಡಿಸಿದರು.

ನ್ಯಾ.ವಿಶ್ವನಾಥ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆದ 10 ನಿಮಿಷದಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಡೀ ದೇಶದಲ್ಲಿ ಈ ರೀತಿಯ ಘಟನೆ ಇದೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಡೆದಿದೆ ಎಂದು ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾ.ವಿಶ್ವನಾಥ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡುತ್ತಿದ್ದೇವೆ. ಅವರು ಸಂಪೂರ್ಣ ಗುಣಮುಖರಾಗಲು ಒಂದು ತಿಂಗಳ ಕಾಲಾವಕಾಶ ಬೇಕು.
-ಡಾ.ದಿವಾಕರ್ ಶೆಟ್ಟಿ, ಮಲ್ಯ ಆಸ್ಪತ್ರೆಯ ವೈದ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News