ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣ ತೊಡಬೇಕು: ಆರ್.ಎಸ್.ಚಿಣ್ಣನ್ನವರ್

Update: 2018-03-13 14:49 GMT

ಧಾರವಾಡ, ಮಾ.13: ಬಾಲ ಕಾರ್ಮಿಕ ಪದ್ಧತಿ ದೇಶದ ಅತಿ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬರೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣ ತೊಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಚಿಣ್ಣನ್ನವರ್ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ, ಸಮಾಜ ಕಲ್ಯಾಣ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನಾ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೊಟೇಲ್, ಅಂಗಡಿ, ಕೈಗಾರಿಕಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಕ್ಕಳು ಕೆಲಸ ಮಾಡುತ್ತಿದ್ದಾರೆ. ಮಕ್ಕಳು ಮೊಬೈಲ್, ಟಿ.ವಿ.ಗಳಿಗೆ ಅಂಟಿಕೊಳ್ಳದೆ, ಓದಿನ ಕಡೆ ಗಮನಹರಿಸಬೇಕು. ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯತ್ತ ಮಕ್ಕಳು ಸಾಗಬೇಕು. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅವಕಾಶ ನೀಡಿ, ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಮಾತನಾಡಿ, ಬದುಕಿನಲ್ಲಿ ವಿದ್ಯಾರ್ಥಿ ಜೀವನ ಶ್ರೇಷ್ಠವಾದದ್ದು, ಅದನ್ನು ಹಾಳು ಮಾಡಿಕೊಳ್ಳಬಾರದು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಕಾರ್ಯಗಳಾಗಬೇಕು ಎಂದರು.

ಮಕ್ಕಳು ಒಳ್ಳೆಯ ಉಪದೇಶಗಳನ್ನು ಅರಿತುಕೊಂಡು ಮುನ್ನಡೆಯಬೇಕು. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯಗಳಾಗಬೇಕು. ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ನಾಗೂರ ಹೇಳಿದರು.

ಹಿರಿಯ ಕಾರ್ಮಿಕ ನಿರೀಕ್ಷಕರಾದ ಭುವನೇಶ್ವರಿ ಕೋಟಿಮಠ ಮಾತನಾಡಿ, ಬಾಲ ಕಾರ್ಮಿಕರಾಗಿ ಮಕ್ಕಳು ಕೆಲಸ ಮಾಡುವುದು ಅಪರಾಧ. ಒಂದು ವೇಳೆ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸವನ್ನು ನಿರ್ವಹಿಸುತ್ತಿದ್ದರೆ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಕ್ಬರ್ ಅಲಿ ಖಾಜಿ, ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿದ್ಯಾ ನಾಡಗೇರ, ಹಿರಿಯ ಕಾರ್ಮಿಕ ನಿರೀಕ್ಷಕ ವೇಮಣ್ಣ, ರೇಖಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News