ಮಂಗಳೂರು ವಿವಿ ಮಟ್ಟದ ಮಹಿಳೆಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ
ಬ್ರಹ್ಮಾವರ, ಮಾ.19: ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ನೂತನ ಕ್ರೀಡಾ ನೀತಿಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಇನ್ನು ಮುಂದೆ ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು. ಅಲ್ಲದೆ ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ವಿಶೇಷ ಹಾಜರಾತಿಯನ್ನು ನೀಡಲಾಗುವುದು ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ಪಾ. ಸಿ.ಎ.ಐಸಾಕ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಶ್ರೀಪಾದ್, ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಮತಾ ಮೇಬನ್, ಒಎಸ್‌ಸಿ ಎಜ್ಯುಕೇಶನಲ್ ಸೊಸೈಟಿಯ ಕಾಲೇಜು ವಿಭಾಗದ ಕಾರ್ಯದರ್ಶಿ ಮಾರ್ಟನ್ ಡಿಸೋಜ, ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ., ಕ್ರೀಡೆ ಮತ್ತು ಯುವ ಸಬಲೀಕರಣ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ್ ಭಟ್ ಉಪಸ್ಥಿತರಿದ್ದರು.
ಉಪನ್ಯಾಸಕಿ ಮೇಧಾ ಭಟ್ ಸ್ವಾಗತಿಸಿದರು. ಮಮತಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರೂಪಿಸಿದರು.