ಮಾ.22ರೊಳಗೆ ಶಾಸಕರ ಅನರ್ಹತೆ ತೀರ್ಪು ಪ್ರಕಟಿಸುವ ಬಗ್ಗೆ ತಿಳಿಸಿ: ಎಜಿಗೆ ಹೈಕೋರ್ಟ್ ಸೂಚನೆ

Update: 2018-03-20 16:07 GMT

ಬೆಂಗಳೂರು, ಮಾ.20: ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಜೆಡಿಎಸ್‌ನ 7 ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಮಾ.22ರ ಮಧ್ಯಾಹ್ನ 12ಗಂಟೆಯೊಳಗೆ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಬಹುದೆ ಎಂಬ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಮಾ.21ರಂದು ತಿಳಿಸಲು ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್‌ಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.

ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ, ಬಿ.ಬಿ.ನಿಂಗಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚವ್ಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸೂಚನೆ ನೀಡಿ, ವಿಚಾರಣೆಯನ್ನು ಮಾ.21ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷದ ಅಭ್ಯರ್ಥಿ ವಿರುದ್ಧ ಶಾಸಕರಾದ ಜಮೀರ್ ಅಹ್ಮದ್ ಖಾನ್, ಎನ್ ಚಲುವರಾಯಸ್ವಾಮಿ, ಎಚ್.ಸಿ ಬಾಲಕೃಷ್ಣ, ಅಖಂಡ ಶ್ರೀನಿವಾಸ ಮೂರ್ತಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಎಸ್ ಭೀಮಾನಾಯಕ್ ಅವರು ಮತ ಚಲಾಯಿಸಿದ್ದಾರೆ. ಹೀಗಾಗಿ, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಈಗಾಗಲೇ ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಆದೇಶವನ್ನು ಪ್ರಕಟಿಸಲು ಸೂಚಿಸಬೇಕು. ಹಾಗೂ ಮಾ.23ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡದಂತೆ ನಿರ್ದೇಶನ ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಸರಕಾರದ ಪರ ವಾದಿಸಿದ ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ಆರ್ ನಾಯಕ್ ಅವರು, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಈಗಾಗಲೇ ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಮಾ.23ರೊಳಗೆ ತೀರ್ಪನ್ನು ಪ್ರಕಟಿಸಲಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಸ್ಪೀಕರ್ ಕೋಳಿವಾಡ ಅವರು ಮಾ.22ರಂದು ತೀರ್ಪನ್ನು ಪ್ರಕಟಿಸುವ ಬಗ್ಗೆ ಮಾ.21ರಂದು ತಿಳಿಸಲು ಎಜಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News