×
Ad

ಶಿವಮೊಗ್ಗ: ಮನಪಾ ಕಚೇರಿಗೆ ಲೋಕಾಯುಕ್ತ ಪೊಲೀಸ್ ತಂಡ ದಿಢೀರ್ ಭೇಟಿ !

Update: 2018-03-20 22:35 IST

ಶಿವಮೊಗ್ಗ, ಮಾ. 20: ಇಲ್ಲಿನ ಮಹಾನಗರ ಪಾಲಿಕೆ ಕಚೆೇರಿಯ ಕಂದಾಯ ಹಾಗೂ ಆಡಳಿತ ವಿಭಾಗಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸ್ ತಂಡ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸಿ ಹಿಂದಿರುಗಿದ ಘಟನೆ ನಡೆದಿದೆ. ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಂಗಪ್ಪ, ಗಣೇಶಪ್ಪಮತ್ತವರ ಸಿಬ್ಬಂದಿ ಭಾಗವಹಿಸಿದ್ದರು. ಹಲವು ಗಂಟೆಗಳ ಕಾಲ ಎರಡು ವಿಭಾಗಗಳಲ್ಲಿ ಲೋಕಾಯುಕ್ತ ಪೊಲೀಸ್ ತಂಡ ಪರಿಶೀಲನೆ ನಡೆಸಿದೆ. ವಿಭಾಗದ ಅಧಿಕಾರಿ- ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿ ಹಿಂದಿರುಗಿದೆ.

ಭೇಟಿಗೆ ಕಾರಣವೇನು?: ಪಾಲಿಕೆಯ ಕಂದಾಯ ಹಾಗೂ ಆಡಳಿತ ವಿಭಾಗದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸಮಪರ್ಕವಾಗಿ ನಡೆಯುತ್ತಿಲ್ಲ. ನಾಗರಿಕರು ಕಚೇರಿಗಳಿಗೆ ಅಲೆದಾಡುವಂತಹ ಸ್ಥಿತಿಯಿದೆ. ಕೆಲ ಅಧಿಕಾರಿಗಳು ಕಾಲಮಿತಿಯಲ್ಲಿ ಕಡತಗಳ ವಿಲೇವಾರಿ ಮಾಡುತ್ತಿಲ್ಲ ಎಂಬುದು ಸೇರಿದಂತೆ ಸಾರ್ವಜನಿಕ ವಲಯದಿಂದ ಹಲವು ದೂರುಗಳು ಲೋಕಾಯುಕ್ತಕ್ಕೆ ಬಂದಿದ್ದವು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು, ಮಂಗಳವಾರ ಈ ಎರಡು ವಿಭಾಗಗಳಿಗೆ ದಿಢೀರ್ ಭೇಟಿಯಿತ್ತು ಸುದೀರ್ಘ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಕಡತ ವಿಲೇವಾರಿಯಲ್ಲಿ ವಿಳಂಬ ಕುರಿತು ತಂಡ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.ಕಡತಗಳ ವಿಲೇವಾರಿಯಲ್ಲಿ ಆನ್‌ಲೈನ್ ವ್ಯವಸ್ಥೆ ಅಳವಡಿಕೆ ಮಾಡಲಾಗಿದ್ದು, ವಿಲೇವಾರಿಯಲ್ಲಿ ವಿಳಂಬವಾಗುತ್ತಿಲ್ಲವೆಂದು ಅಧಿಕಾರಿಗಳು ಲೋಕಾಯುಕ್ತ ತಂಡಕ್ಕೆ ಸಮಜಾಯಿಷಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಾರ್ವಜನಿಕರ ಕಾರ್ಯಗಳನ್ನು ವಿಳಂಬಕ್ಕೆ ಆಸ್ಪದವಾಗದ ರೀತಿಯಲ್ಲಿ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತ ತಂಡ ಸೂಚಿಸಿ ಹಿಂದಿರುಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಪಾಲಿಕೆಯ ಸಿಬ್ಬಂದಿಯೋರ್ವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಿಗೆ ಸಂಬಂಧಿಸಿದ ಕಾರ್ಯಗಳು ವಿಳಂಬಗತಿಯಲ್ಲಿ ಸಾಗುತ್ತಿವೆ ಎಂಬ ದೂರಿನ ಆಧಾರದ ಮೇಲೆ ಪಾಲಿಕೆಯ ಕೆಲ ವಿಭಾಗಗಳಿಗೆ ಭೇಟಿಯಿತ್ತು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಆರೋಪಕ್ಕೆ ಸಂಬಂಧಿಸಿದ ಪೂರಕ ಮಾಹಿತಿಗಳು ಲಭ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಪೂರಕ ಮಾಹಿತಿ ಲಭ್ಯವಾದರೆ, ನಿಯಮಾನುಸಾರ ಸಂಬಂಧಿಸಿದವರ ವಿರುದ್ಧ ಲೋಕಾಯುಕ್ತಕ್ಕೆ ವರದಿ ಕಳುಹಿಸಿ ಕೊಡಲಾಗುವುದು.

ಪುರುಷೋತ್ತಮ್,ಲೋಕಾಯುಕ್ತ ಡಿವೈಎಸ್ಪಿ

‘ಪಾಲಿಕೆಯಿಂದ ಉತ್ತಮ ಸೇವೆ’

ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದೆ. ಮತ್ತೊಂದೆಡೆ ವಿಧಾನಸಭೆ ಚುನಾವಣೆ ಪ್ರಕ್ರಿಯೆಯಲ್ಲಿಯೂ ಕೆಲ ಅಧಿಕಾರಿ, ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಹೊರತಾಗಿಯೂ ನಾಗರಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪಾಲಿಕೆ ಆಡಳಿತ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಲ್ ಗೋಪಿ ತಿಳಿಸಿದ್ದಾರೆ. ಮಂಗಳವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಾಗದಂತೆ ಆಯುಕ್ತ ಮುಲ್ಲೈ ವುುಹಿಲನ್ ಎಚ್ಚರವಹಿಸಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News