×
Ad

ದೇಶದ ಕಣ್ಣು ಕರ್ನಾಟಕ ರಾಜಕಾರಣದ ಮೇಲೆ ನೆಟ್ಟಿದೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Update: 2018-03-21 23:10 IST

ಮೈಸೂರು,ಮಾ.21: ಕರ್ನಾಟಕ ರಾಜಕಾರಣದ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶಕ್ಕೆ ಮತ್ತು ರಾಜ್ಯಕ್ಕೆ ಸಂದೇಶ ನೀಡಲಿದೆ. ಹಾಗಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಬಲಪಡಿಸಬೇಕು ಎಂದು ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಮೈಸೂರು ಜಿಲ್ಲೆಯಲ್ಲಿ ಇದೇ ತಿಂಗಳ 25 ರಂದು ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಕೋಮುವಾದಿಗಳಿಗೆ ತಕ್ಕ ಪಾಠ ಕಲಿಸಬೇಕಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಬಿಜೆಪಿಯವರು ಇದ್ದಾರೆ. ಅದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವಕಾಶ ನೀಡಬಾರದು ಎಂದು ಹೇಳಿದರು.

ರಾಷ್ಟ್ರಮಟ್ಟದ ಒಬ್ಬ ನಾಯಕ ಮುಂದಿನ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿಯವರು ಪುರಸಭಾ ಚುನಾವಣೆಯಲ್ಲಿ ಓಡಾಡುವ ರೀತಿ ಗಲ್ಲಿಗಲ್ಲಿಗಳನ್ನು ಸುತ್ತಿ ಕಾಂಗ್ರೆಸ್‍ಪಕ್ಷವನ್ನು ಬಲಗೊಳಿಸುತ್ತಿದ್ದಾರೆ. ಮುಂದೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಮತ್ತೊಮ್ಮೆ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬ ಸಂದೇಶವನ್ನು ಈ ಭಾಗದ ಕಾರ್ಯಕರ್ತರು ನೀಡಬೇಕು ಎಂದು ಮನವಿ ಮಾಡಿದರು.

ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದರೆ ಸಿದ್ಧರಾಮಯ್ಯ ಅವರನ್ನು ಮಣಿಸಿದಂತೆ ಎಂದು ವಿರೋಧ ಪಕ್ಷಗಳು ಕೆಲಸ ಮಾಡುತ್ತಿವೆ. ಅದಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕ ಎಂ.ಸತ್ಯನಾರಾಯಣ, ಡಾ.ಯತೀಂದ್ರ ಸಿದ್ಧರಾಮಯ್ಯ, ಕಾಂಗ್ರೆಸ್ ಮುಖಂಡರಾದ ಅಕ್ಬರ್ ಅಲೀಂ, ಮಂಜುಳ ಮಾನಸ, ಮರೀಗೌಡ, ಬಸವರಾಜು, ರಾಕೇಶ್ ಪಾಪಣ್ಣ, ಧರ್ಮೇಂದ್ರ, ರಂಗಸ್ವಾಮಿ, ಹಿನಕಲ್ ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News